ತುಮಕೂರು: ಸಿದ್ದಗಂಗಾ ಮಠಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೊಟ್ಟಿದ್ದ 70 ಲಕ್ಷ ರೂ. ವಿದ್ಯುತ್ ಬಿಲ್ ನೋಟಿಸ್'ನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.
ಬೆಳಗಾವಿಯಲ್ಲಿ ಗುರುವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ನೋಟಿಸ್ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದರು.
‘ಸಿದ್ದಗಂಗಾ ಮಠದ ಮೇಲೆ ನಮಗೆ ಅಪಾರ ಗೌರವವಿದೆ, ನೀರು ಬಳಸದ ಮಠಕ್ಕೆ ನೋಟಿಸ್ ನೀಡಿದರೆ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತು ಮಾಡುತ್ತೇವೆ, ಮುಂದಿನ ದಿನಗಳಲ್ಲಿ ಮಠಕ್ಕೆ ಉಚಿತವಾಗಿ ನೀರು ಕೊಡುತ್ತೇವೆ. ಕೆಐಎಡಿಬಿಯ ಸಿಇಒ ಮತ್ತು ನಾನು ಈ ಬಗ್ಗೆ ಮಠದ ಸ್ವಾಮೀಜಿಗಳೊಂದಿಗೆ ಮಾತನಾಡುತ್ತೇವೆ. ಕೆಐಎಡಿಬಿ ವ್ಯಾಪ್ತಿಯಲ್ಲಿರುವ ಕೆರೆಯ ನೀರನ್ನು ಬಳಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
ಸಿದ್ಧಗಂಗಾ ಮಠಕ್ಕೆ ಜಾರಿಯಾದ ವಿದ್ಯುತ್ ಬಿಲ್ ಕುರಿತು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರ ಮಠಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ಟೀಕಿಸಿದ್ದರು.
ಬಿಜೆಪಿ ಆಡಳಿತದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ಮಠಮಾನ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದರು. "ಕಾಂಗ್ರೆಸ್ ಸರ್ಕಾರ ಈಗ ವಕ್ಫ್ ಬೋರ್ಡ್ ಮೂಲಕ ಮಠಗಳ ಆಸ್ತಿಯನ್ನು ಕಬಳಿಸಲು ಪ್ರಯತ್ನಿಸುತ್ತಿದೆ. ಇದೀಗ ಸಿದ್ದಗಂಗಾ ಮಠವನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕಿಡಿಕಾರಿದ್ದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ವಕ್ಫ್ ಮಂಡಳಿ ಹೆಸರಿನಲ್ಲಿ ಮಠ-ಮಂದಿರಗಳ ಆಸ್ತಿಗಳಿಗೆ ನೋಟಿಸ್ ಕಳುಹಿಸಿದ್ದಾಯ್ತು, ಈಗ ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್‌ನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಎಡಿಬಿ (KIADB) ಮಠಕ್ಕೆ ಪತ್ರ ಬರೆದಿದೆ. ಹಿಂದೂಗಳ ಮಠ-ಮಾನ್ಯಗಳು, ದೇವಸ್ಥಾನಗಳು ಅಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.