ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಮಹಾನಗರ ಪಾಲಿಕೆ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಅಧಿಕೃತ ಮೂಲಗಳ ಪ್ರಕಾರ, ಕೆಆರ್‌ಎಸ್ ರಸ್ತೆಯ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಹೊರವರ್ತುಲ ರಸ್ತೆ ಜಂಕ್ಷನ್‌ವರೆಗಿನ ರಸ್ತೆಯನ್ನು ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಪ್ರಸ್ತಾಪಿಸಲಾಗಿದೆ. ಚಾಮರಾಜ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರ ಸಲಹೆಯನ್ನು ಆಧರಿಸಿ, ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ನವೆಂಬರ್ 22 ರಂದು ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಕೌನ್ಸಿಲ್ ಸಭೆಯಲ್ಲಿ ಮಂಡನೆಯಾಗುವ ಮೊದಲು ಮೈಸೂರು ಜಿಲ್ಲಾಧಿಕಾರಿ ಮುಂದೆ ವಿಷಯ ಮಂಡಿಸಲಾಗಿದೆ. ನಂತರ ಎಂಸಿಸಿ ಡಿಸೆಂಬರ್ 13 ರಂದು 30 ದಿನಗಳಲ್ಲಿ ಪ್ರಸ್ತಾವನೆಯ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸುವ ಪ್ರಕಟಣೆ ನೀಡಿದೆ.
ಮೈಸೂರು ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದೆ. ಮೈಸೂರಿನ ಐತಿಹಾಸಿಕ ನಗರಿ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ಕ್ರಮ ಖಂಡನೀಯ ಎಂದು ಜೆಡಿಎಸ್ ಹೇಳಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಆರೋಪಿಯಾಗಿದ್ದು, ಲೋಕಾಯುಕ್ತ ಪೊಲೀಸರಿಂದ ತನಿಖೆ ಎದುರಿಸುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಮಂಡಳಿ ಇಲ್ಲ. ಕಾಂಗ್ರೆಸ್ ಸರ್ಕಾರ ನೇಮಿಸಿದ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಋಣಿಯಾಗಿರುವುದರಿಂದ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡಲು ನಿರ್ಧರಿಸಿದ್ದಾರೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವ ‘ಭ್ರಷ್ಟ’ ಮುಖ್ಯಮಂತ್ರಿಯ ಹೆಸರನ್ನು ರಸ್ತೆಗೆ ಹೆಸರಿಸಿರುವುದು ಐತಿಹಾಸಿಕ ಮೈಸೂರಿಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅವಮಾನ’ ಎಂದು ಜೆಡಿಎಸ್ ಆರೋಪಿಸಿದೆ.
ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಗರಣದ ದೂರು ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸೇರಿದಂತೆ ಹಲವು ನಾಗರಿಕರು ಕೂಡಾ ಮಹಾನಗರ ಪಾಲಿಕೆ ಪ್ರಸ್ತಾವವನ್ನು ವಿರೋಧಿಸಿದ್ದಾರೆ. ಈ ಪ್ರಸ್ತಾವವನ್ನು ಕೈಬಿಡದಿದ್ದರೆ ಹೈಕೋರ್ಟ್ ನಲ್ಲಿ ಹೋರಾಟ ನಡೆಸಲಾಗುವುದು ಎಂದು ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.