ಹುಬ್ಬಳ್ಳಿ: ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದು, ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಆರು ಅಯ್ಯಪ್ಪ ಭಕ್ತರು ಸದ್ಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಕಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೃಹ ಸಚಿವ ಜಿ. ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿದ್ದಾರೆ. ಅಡುಗೆ ಅನಿಲ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.
ಗಾಯಾಳುಗಳಿಗೆ ತಜ್ಞ ವೈದ್ಯರ ತಂಡದಿಂದ ಕಾಳಜಿ ವಹಿಸಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ಎಕ್ಸ್ ಪೋಸ್ಟ್‌ನಲ್ಲಿ ಪರಮೇಶ್ವರ ಹೇಳಿದ್ದಾರೆ.
ಅಪಘಾತದಲ್ಲಿ ಮೂವರ ಸಾವು
ಈಮಧ್ಯೆ, ಮತ್ತೊಂದು ಘಟನೆಯಲ್ಲಿ, ಕಲಬುರಗಿ ಜಿಲ್ಲೆಯ ಗೊಬ್ಬೂರು ಗ್ರಾಮದ ಬಳಿ ಬುಧವಾರ ಕಬ್ಬು ತುಂಬಿದ ಲಾರಿ, ಪ್ರವಾಸಿ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವಿಗೀಡಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ವಿನಿತಾ (56), ಅನೂಪ್ (29) ಮತ್ತು ಬಸವರಾಜ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಎ ಶ್ರೀನಿವಾಸುಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.