ಮೈಸೂರು: ಅವೈಜ್ಞಾನಿಕ ಹಂಪ್ಸ್'ಗೆ ಮೂವರು ಬಲಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರ ಆಗ್ರಹ
ಮೈಸೂರಿನ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಮುಖ್ಯ ದ್ವಾರದ ಎರಡು ಬದಿಯಲ್ಲಿ ಕೆಲವು ದಿನಗಳ ಹಿಂದೆ ರಾತ್ರೋರಾತ್ರಿ ನಿರ್ಮಿಸಲಾದ ಅವೈಜ್ಞಾನಿಕ ಹಂಪ್ಸ್'ಗೆ ಮೂವರು ಬಲಿಯಾಗಿದ್ದಾರೆ.
ಮೈಸೂರು: ಮೈಸೂರಿನ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಮುಖ್ಯ ದ್ವಾರದ ಎರಡು ಬದಿಯಲ್ಲಿ ಕೆಲವು ದಿನಗಳ ಹಿಂದೆ ರಾತ್ರೋರಾತ್ರಿ ನಿರ್ಮಿಸಲಾದ ಅವೈಜ್ಞಾನಿಕ ಹಂಪ್ಸ್'ಗೆ ಮೂವರು ಬಲಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅಪಘಾತಕ್ಕೆ ಕಾರಣಕರ್ತರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ (ಎಂಸಿಸಿ) ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತರ ಕುಟುಂಬಸ್ಥರು ಒತ್ತಾಯಿಸುತ್ತಿದ್ದಾರೆ.
ಅವೈಜ್ಞಾನಿಕ ಹಂಪ್ಸ್ ನಿಂದಾಗಿ ಕೆಲ ದಿನಗಳ ಹಿಂದಷ್ಟೇ ಸಂಭವಿಸಿದ ಅಪಘಾತದಲ್ಲಿ ಯಶವಂತ್ ಎಂಬುವವರು ಮೃತಪಟ್ಟಿದ್ದರು.
ಮಗನ ಸಾವು ಕುರಿತು ಪ್ರತಿಕ್ರಿಯೆ ನೀಡಿರುವ ರಾಜೇಂದ್ರ ಪ್ರಸಾದ್ ಅವರು, ಯಶವಂತ್ ನಮ್ಮ ಏಕೈಕ ಪುತ್ರನಾಗಿದ್ದ. ಅವೈಜ್ಞಾನಿಕವಾಗಿ ಹಂಪ್ಸ್ ನಿರ್ಮಿಸಿದ ಎಂಸಿಸಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮವಾಗಬೇಕು. ಇಂತಹ ನಿರ್ಲಕ್ಷ್ಯತನದ ವರ್ತನೆ ಮತ್ತೆ ಮರುಕಳುಹಿಸದಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಯಶವಂತ್ ಪತ್ನಿ, ನನ್ನ ಸೊಸೆಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಒತ್ತಾಯಿಸಿದ್ದಾರೆ.