ಕರ್ನಾಟಕ ಬಜೆಟ್ 2024 LIVE: ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಆಯವ್ಯಯ ಮಂಡಿಸಿದ ಸಿಎಂ: ಬಿಜೆಪಿಗೆ ತಿರುಗೇಟು
‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡು ಪ್ರಸ್ತಾಪಿಸಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.
ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಓದಿ ಮುಕ್ತಾಯಗೊಳಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸಿದ್ದರು. 1995 ಮತ್ತು 1996ರಲ್ಲಿ ದೇವೇಗೌಡರು ಸಿಎಂ ಆಗಿದ್ದಾಗ, 1997, 1998, 1999ರಲ್ಲಿ ಜೆ.ಎಚ್. ಪಟೇಲ್ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಗೆ ಸೂಟ್‌ಕೇಸ್ ಬದಲು ಬ್ಯಾಗ್ ಹಿಡಿದು ತೆರಳುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಸರ್ಕಾರಿ ಸೌಮ್ಯದ ಲಿಡ್ಕರ್ ಕಂಪನಿಯ ಬ್ಯಾಗ್‌ನಲ್ಲಿ ಬಜೆಟ್ ಪ್ರತಿ ಇರಿಸಲಾಗಿದ್ದು, ಅದನ್ನು ತೆಗೆದುಕೊಂಡು ಸಿದ್ದರಾಮಯ್ಯ ಅವರು ಕಾವೇರಿಯಿಂದ ವಿಧಾನಸೌಧಕ್ಕೆ ತೆರಳಿದರು.
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2024-25ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಸಿಎಂ ಸಿದ್ದರಾಮಯ್ಯ
ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ
2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,71,383 ಕೋಟಿ ರೂ.3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಶಾಸಕರಿಗೆ ತಡೆ
ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಅಥವಾ ಭಿತ್ತಿಪತ್ರ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಆದರೆ, ಪ್ಲಕಾರ್ಡ್ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಮಾರ್ಷಲ್ಗಳು ಬಿಡಲಿಲ್ಲ. ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿದೆ. ಬಿಜೆಪಿ ಶಾಸಕರು ಪೋಸ್ಟರ್ ಗಳನ್ನು ತೆಗೆದುಕೊಂಡು ಬಂದಿದ್ದಾರೆ. ‘ಏನಿಲ್ಲಾ ಏನಿಲ್ಲಾ ಬಜೆಟ್‌ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್ಗಳನ್ನು ಬಿಜೆಪಿ ಶಾಸಕರು ತಂದಿದ್ದಾರೆ.
ಮದ್ಯದ ದರ ಮತ್ತೆ ಹೆಚ್ಚಳ: ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ
ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದರು.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ನಮ್ಮ ಗ್ಯಾರಂಟಿಗಳನ್ನೇ ಕದ್ದು ನಮ್ಮನ್ನು ಟೀಕಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ರಾಜ್ಯದ 3 ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.
2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿಎಸ್'ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ: ಸಿದ್ದರಾಮಯ್ಯ
ಮಹಿಳೆಯರಿಗೆ ಸರ್ಕಾರದಿಂದಲೇ ಶೇ. 6 ರಷ್ಟು ಬಡ್ಡಿಯಲ್ಲಿ ಸಾಲ, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ 90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ
ವಿಪಕ್ಷ ಬಿಜೆಪಿ ನಾಯಕರು ಬಜೆಟ್ಗೆ ಬಹಿಷ್ಕಾರ ಹಾಕಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಿಜೆಪಿ ನಾಯಕರು ಸದನದಿಂದ ಹೊರಬಂದಿದ್ದಾರೆ. ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗುತ್ತಾ ಸಭಾತ್ಯಾಗ ಮಾಡಿದರು. ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಬಿಜೆಪಿ ಶಾಸಕರು ಪೋಸ್ಟರ್ ಅಂಟಿಸಿದರು.
ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ಕೇಂದ್ರ ಸರ್ಕಾರ ಮಾಡದ ಕೆಲಸವನ್ನ ನಾವು ಮಾಡಿದ್ದೇವೆ, ಗ್ಯಾರಂಟಿ ಯೋಜನೆಗಳಿಗೆ 57 ಸಾವಿರ ಕೋಟಿ ಬಳಸಲಾಗುತ್ತಿದೆ: ಸಿದ್ದರಾಮಯ್ಯ
7.50 ಕೋಟಿ ರೂ. ವೆಚ್ಚದಲ್ಲಿ ಕೆಫೆ ಸಂಜೀವಿನಿ ಹೆಸರಿನ 50 ಮಹಿಳಾ ಕೆಫೆಗಳನ್ನು ಈ ವರ್ಷದಲ್ಲಿ ರಾಜ್ಯಾದ್ಯಂತ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದು, ಈ ಕ್ಯಾಂಟೀನ್‌ಗಳು ಗ್ರಾಮೀಣ ಪ್ರದೇಶಗಳಲ್ಲಿನ ಬೇಡಿಕೆ ಮತ್ತು ಪೂರೈಕೆಯ ಕೊರತೆಯನ್ನು ನೀಗಿಸಲಿದ್ದು, ಆರೋಗ್ಯಕರ, ಆರೋಗ್ಯಕರ ಮತ್ತು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಬೇಯಿಸಿದ ಆಹಾರ ಮತ್ತು ಸಾಂಪ್ರದಾಯಿಕ ಸ್ಥಳೀಯ ಪಾಕಪದ್ಧತಿಯನ್ನು ಪರಿಚಯಿಸಲಿದೆ.
ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸು, ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ
2024-25ನೇ ಸಾಲಿನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಖರ್ಚು?
ಸಾಲ ತೀರಿಕೆ-18 ಪೈಸೆ, ನೀರು ಪೂರೈಕೆ ಮತ್ತು ನೈರ್ಮಲ್ಯ – 3 ಪೈಸೆ, ಶಿಕ್ಷಣ-11ಪೈಸೆ, ಆರೋಗ್ಯ-4 ಪೈಸೆ, ಇತರೆ ಸಾಮಾಜಿಕ ಸೇವೆಗಳು- 3 ಪೈಸೆ, ಕೃಷಿ ನೀರಾವರಿ, ಮತ್ತು ಗ್ರಾಮೀಣಾಭಿವೃದ್ಧಿ- 14ಪೈಸೆ, ಇತರೆ ಆರ್ಥಿಕ ಸೇವೆಗಳು- 15ಪೈಸೆ, ಸಮಾಜ ಕಲ್ಯಾಣ-15 ಪೈಸೆ, ಇತರೆ ಸಾಮಾನ್ಯ ಸೇವೆಗಳು- 17 ಪೈಸೆ.
ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ಶೋಧನಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಅಲ್ಲದೆ ಡೀಪ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಶಿಕ್ಷಣ ಕ್ಷೇತ್ರ
ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್ ನೀಡಲಾಗುವುದು.
ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಫ್ರೀ ಕರೆಂಟ್ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನೀರಾವರಿಗೆ ಸಿಎಂ ಕೊಡುಗೆ
ಮೇಕೆದಾಟು ಯೋಜನೆ ಶೀಘ್ರವೇ ಜಾರಿಗೆ ಕ್ರಮ
ಎತ್ತಿನಹೊಳೆ ಯೋಜನೆಯ ಎಲ್ಲ ಲಿಫ್ಟ್ ಕಾಮಗಾರಿ ಪೂರ್ಣಗೊಳಿಸಲು ತೀರ್ಮಾನ
ಕಳಸಾ-ಬಂಡೂರಿ ಯೋಜನೆ ಜಾರಿಯ ಅಡೆತಡೆ ನಿವಾರಣೆ
ಅಂಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು. 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ಆರೋಗ್ಯ ಕ್ಷೇತ್ರ
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೊಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸುವುದಾಗಿ ಇಂದಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮ್ಯಾಮೊಗ್ರಫಿ ಯಂತ್ರಗಳ ಅಳವಡಿಕೆ, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಉಡುಪಿ, ಕೋಲಾರ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪಸ್ಕೊಪಿ ಉಪಕರಣಗಳ ಖರೀದಿ 21 ಕೋಟಿ ರೂಪಾಯಿ ಅನುದಾನ.
ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಹಬ್ ಅಂಡ್ ಸ್ಪೋಕ್ ಮಾದರಿಯಲ್ಲಿ ವಿಸ್ತರಿಸುವ ಮೂಲಕ ಸ್ಟೆಮಿ (STEMI- ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ ಸ್ಟೆಮಿ ಹಾಗೂ ಸ್ಟ್ರೋಕ್ ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂಪಾಯಿಗಳನ್ನು ಘೋಷಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.
2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
ಕನ್ನಡ ಭಾಷೆಗೆ ಭಾಷಾಂತರವನ್ನು ಸುಲಭಗೊಳಿಸಲು ಕನ್ನಡ ಕಸ್ತೂರಿ ಎಂಬ ಅನುವಾದ ಸಾಫ್ಟ್‌ವೇರ್ ಅನ್ನು ರಚಿಸಲಾಗುವುದು, ಭಾಷೆಯ ಅಡೆತಡೆಗಳನ್ನು ನಿವಾರಿಸುವ ಮೂಲಕ ಕನ್ನಡಿಗರಿಗೆ ಮತ್ತು ಕನ್ನಡೇತರರಿಗೆ ಅನುಕೂಲವಾಗುತ್ತದೆ.
ನಮ್ಮ ಮಿಲೆಟ್ ಯೋಜನೆ ಘೋಷಣೆ
ರಾಜ್ಯ ಸರ್ಕಾರವು ಸಿರಿಧಾನ್ಯಗಳ ಉತ್ಪಾದನೆಗೆ ಹೊಸ ಯೋಜನೆ ಘೋಷಣೆ ಮಾಡಿದೆ. ಬಜೆಟ್ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮಿಲೆಟ್ ಯೋಜನೆ ಘೋಷಣೆ ಮಾಡಿದ್ದಾರೆ.
ಬಜೆಟ್ ಮಂಡನೆ ಮುಕ್ತಾಯ.
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಸೂಫಿ ಅಧ್ಯಯನ ಪೀಠ
ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್: ಸಿಎಂ ಸಿದ್ದರಾಮಯ್ಯ