ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ  
ರಾಜ್ಯ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಸುತ್ತೋಲೆ: ಸಚಿವ ಶಿವರಾಜ ತಂಗಡಗಿ ಸ್ಪಷ್ಟನೆ

Sumana Upadhyaya

ಬೆಂಗಳೂರು: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಿ ನಂತರ ವಿವಾದ ಕೇಳಿಬಂದ ಹಿನ್ನೆಲೆಯಲ್ಲಿ ಸುತ್ತೋಲೆ ಹಿಂಪಡೆದಿದ್ದ ಮತ್ತು ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ತೆಗೆಸಿ ಆಮೇಲೆ ಯೂಟರ್ನ್ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಅಂಥದ್ದೇ ಕ್ರಮಕ್ಕೆ ಮುಂದಾಗಿ ವಿವಾದ ಮೈಮೇಲೆ ಎಳೆದುಕೊಂಡಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.

ಏನಿದು ಸುತ್ತೋಲೆ?: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿತ್ತು. ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ 1ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರದ ಸುತ್ತೋಲೆ


ಸಚಿವರು ಹೇಳಿದ್ದೇನು?:
ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಇದಕ್ಕೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲಾ ಶಾಲೆಗಳೂ ಒಂದೇ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು.

ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ ವಿಚಾರವಾಗಿ ಮಾತನಾಡಿದ ಅವರು, ಸದನದಲ್ಲಿ ಚರ್ಚೆ ಆಗಿದೆ. ಕೈಗಾರಿಕೆಗಳಿಗೂ ಹೆಸರು ಹಾಕುವ ಪದ್ದತಿ ಬರುತ್ತಿದೆ. ವಿಧಾನಸೌಧದ ಮುಂಭಾಗ ಭುವನೇಶ್ವರಿ ದೇವಿ ಪ್ರತಿಮೆ ನಿರ್ಮಾಣ ವಿಚಾರವಾಗಿ, ಅದರ ಬಗ್ಗೆ ಚರ್ಚೆ ಆಗುತ್ತಿದೆ. ವಿಧಾನಸೌಧ ಮುಂಭಾಗದಲ್ಲಿ ಜಾಗ ಗುರುತಿಸಲಾಗಿದೆ. ಆದಷ್ಟು ಬೇಗ ಇದರ ಬಗ್ಗೆ ಮಾಹಿತಿ ಒದಗಿಸುತ್ತೇವೆ ಎಂದರು.

SCROLL FOR NEXT