ರಾಜ್ಯ

ನಟ ಯಶ್ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ, ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ

Sumana Upadhyaya

ಗದಗ: ರಾಕಿಂಗ್ ಸ್ಟಾರ್ ಯಶ್ (Rocking star Yash) ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.

ಸಾಮೂಹಿಕ ಅಂತ್ಯಸಂಸ್ಕಾರ: ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು. 

ಪರಿಹಾರ: ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. 

ಇಂದು ಸಂಜೆ ನಟ ಯಶ್ ಭೇಟಿ: ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳು ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ನಟ ಯಶ್ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ತಮ್ಮ ಮುಂಬರುವ ಚಿತ್ರದ ಕೆಲಸದ ಮೇಲೆ ವಿದೇಶಕ್ಕೆ ತೆರಳುವುದಾಗಿ ಈ ಹಿಂದೆಯೇ ಹೇಳಿದ್ದ ಯಶ್ ಈ ಘಟನೆ ನಡೆದ ಹಿನ್ನೆಲೆಯಲ್ಲಿ ವಿಶೇಷ ವಿಮಾನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಗದಗಕ್ಕೆ ಬಂದು ಅಲ್ಲಿಂದ ರಸ್ತೆ ಮಾರ್ಗ ಮೂಲಕ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

SCROLL FOR NEXT