ರಾಜ್ಯ

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಮುಂದಿಲ್ಲ: ಹೆಚ್ ಕೆ. ಪಾಟೀಲ್

Manjula VN

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ಶುಕ್ರವಾರ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಐದು ವರ್ಷಗಳ ಕಾಲ ತಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆಂಬ ಯತೀಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಶಿಸ್ತಿನ ರಾಜಕೀಯ ಪಕ್ಷವಾಗಿದ್ದು, ನಾವೆಲ್ಲರೂ ಹೈಕಮಾಂಡ್ ಸಲಹೆಯನ್ನು ಪಾಲಿಸುತ್ತೇವೆಂದು ಹೇಳಿದರು.

ಯತೀಂದ್ರ ಅವರ ಹೇಳಿಕೆ ಸಂಬಂಧ ಚರ್ಚೆ ಅಥವಾ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳು ಮತ್ತು 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಜನಪ್ರಿಯತೆ ಗಳಿಸುತ್ತಿದ್ದು, ಈ ನಿಟ್ಟಿನಲ್ಲಿ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ನಾಯಕತ್ವ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸುತ್ತಿರುವುದು ಅಸಂಬದ್ಧವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಮಾತನಾಡಿದ ಅವರು, ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪುವ ಯಾರೇ ಆಗಲಿ ಪಕ್ಷಕ್ಕೆ ಸ್ವಾಗತ ಎಂದರು.

ಬಳಿಕ ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ವರದಿಯನ್ನೂ ತಿರಸ್ಕರಿಸಿದರು

SCROLL FOR NEXT