ರಾಜ್ಯ

ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

Lingaraj Badiger

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪರಿಹಾರ ಘೋಷಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ‌. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ.

ಮೃತ ವಿದ್ಯಾರ್ಥಿಗಳನ್ನು ಶ್ವೇತಾ ಪಾಟೀಲ(16), ಸಾಗರ ಕಡಕೋಳ(17), ಗೋವಿಂದ ಜಂಬಗಿ(13), ಬಸವರಾಜ್ ಕೊಟಗಿ(17) ಎಂದು ಗುರುತಿಸಲಾಗಿದೆ.

ಅಲಗೂರು ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ ತಡರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ.

SCROLL FOR NEXT