ಬೆಂಗಳೂರು: ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಅಂತರ್ ಇಲಾಖಾ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 15 ಪ್ಯಾಕೇಜ್ ಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈಗಾಗಲೇ 13 ಪ್ಯಾಕೇಜ್ ಗಳನ್ನು ಅಂತಿಮಗೊಳಿಸಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಹೇಳಿದರು.
ಇನ್ನೆರಡು ಪ್ಯಾಕೇಜ್‌ಗಳಿಗೆ ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದ್ದು, ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಯಾವುದಾದರೂ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡಬೇಕಿದ್ದಲ್ಲಿ, ತಕ್ಷಣವೇ ಸಮೀಕ್ಷೆ ನಡೆಸಿ, ಕೋರಿಕೆ ಸಲ್ಲಿಸಬೇಕು. ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ವೇಳೆಯೇ ಬದಲಾವಣೆಗಳಿದ್ದಲ್ಲಿ ಮಾಡಿಕೊಳ್ಳಬೇಕು. ಜಲಮಂಡಳಿಯಿಂದ ರಸ್ತೆಯ ಎರಡೂ ಬದಿ ಕೊಳವೆಗಳನ್ನು ಅಳವಡಿಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅಥವಾ ಕತ್ತರಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.
ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ‘ಯುಟಿಲಿಟಿಗಾಗಿ ಡಕ್ಟ್ಸ್’ ಅಳವಡಿಕೆಗೆ ಸಮಗ್ರ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳ ಪ್ರದೇಶದಲ್ಲಿ ಸಂಚಾರ ಪೊಲೀಸ್ ವಿಭಾಗದ ಜೊತೆ ಸಮನ್ವಯ ಸಾಧಿಸಿ ಮಾರ್ಗ ಬದಲಾವಣೆ ಮಾಡಿಕೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿಯ ವೇಳೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಹಂತ ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.