ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಮೃತ ಅಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಿಂದ ಸಾವು ಸಂಭವಿಸಿದ ಮೊದಲ ಪ್ರಕರಣ ಇದಾಗಿದೆ. ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳಿವೆ. ಈ ನಡುವೆ ಬೆಂಗಳೂರಿನಲ್ಲಿ ಡೆಂಗ್ಯು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಮನಬಂದಂತೆ ಶುಲ್ಕ ವಿಧಿಸುತ್ತಿರುವುದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಆರೋಗ್ಯ ಇಲಾಖೆ ಎಲ್ಲಾ ಆಸ್ಪತ್ರೆಗಳಿಗೂ ಅನ್ವಯಿಸುವ ಬೆಲೆ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.
ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಪರಿಣಾಮ, ಹಲವು ನದಿಗಳು, ಜಲಪಾತಗಳು ರಭಸದಿಂದ ಹರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಉಡುಪಿಯ ಅಮಾವಾಸ್ಯೆಬೈಲು ಪ್ರದೇಶದಲ್ಲಿ ಭಾರಿ ಸುಂಟರಗಾಳಿಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಬೆಳ್ತಂಗಡಿ ತಾಲೂಕಿನ ನರಸಿಂಹಗಢ ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಕೊಡಗಿನ ಕೆ ನಿಡುಗಣೆ ಗ್ರಾಮ ಪಂಚಾಯತ್ ಜಿಲ್ಲೆಯ ಮಾಂದಲಪಟ್ಟಿ ಮತ್ತು ಅಬ್ಬೆ ಫಾಲ್ಸ್ ಪ್ರದೇಶಗಳಿಗೆ ಜೀಪ್ ನಲ್ಲಿ ಪ್ರವಾಸಿಗರ ಸಾಗಾಟಕ್ಕೆ ಹಠಾತ್ ನಿಷೇಧ ಹೇರಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರ ಗೌಡ ಸೇರಿ ಇತರ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಪ್ರಕರಣದ ಬಗ್ಗೆ ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಪವಿತ್ರಾ ಗೌಡ ಅವರು ದರ್ಶನ್ ಪತ್ನಿ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿ ಆಯುಕ್ತರಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದಿದ್ದು, ನೀವು ಸುದ್ದಿಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಯಿಂದ ರಾಷ್ಟ್ರೀಯ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ದಂಪತಿ ಬಂಧನ ಅಂತ ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಮನವಿ ಮಾಡಿದ್ದಾರೆ.
ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ, ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಅವಧಿಯಲ್ಲಿ 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ನಾವು ಹಲವು ಪ್ರಕರಣ ಸಿಬಿಐಗೆ ಕೊಡುವಂತೆ ಕೇಳಿದ್ದೆವು. ಅವರೇನಾದ್ರು(ಬಿಜೆಪಿಯವರು) ಒಂದಾದ್ರು ಕೊಟ್ಟಿದ್ರಾ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ಕೌನ್ಸೆಲಿಂಗ್ ಮೂಲಕ ಸಬ್ರಿಜಿಸ್ಟ್ರಾರ್ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದುವರೆಗೂ ನೇರವಾಗಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಮಾಡಲಾಗುತ್ತಿತ್ತು. ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ. ಈ ವರ್ಷದಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆಯ ನಂತರ ಸಚಿವ ಎಚ್.ಕೆ.ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.