ರಾಜ್ಯ

SITಯಿಂದ ಮಾಜಿ ಸಚಿವ ಬಿ.ನಾಗೇಂದ್ರ ವಿಚಾರಣೆ; ಮನೆ ಊಟ, ಹಾಸಿಗೆಗೆ ದರ್ಶನ್ ಅರ್ಜಿ; ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ; ಇವು ಇಂದಿನ ಪ್ರಮುಖ ಸುದ್ದಿಗಳು 09-07-24

ವಾಲ್ಮೀಕಿ ನಿಗಮ ಹಗರಣ: ಎಸ್ಐಟಿಯಿಂದ ಮಾಜಿ ಸಚಿವ ಬಿ.ನಾಗೇಂದ್ರ ವಿಚಾರಣೆ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಿಶೇಷ ತನಿಖಾ ತಂಡ ಇಂದು ವಿಚಾರಣೆ ನಡೆಸಿದೆ. ಜುಲೈ 5ರಂದು ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷರೂ ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ಅವರಗೆ ಎಸ್ಐಟಿ ನೋಟಿಸ್ ನೀಡಿತ್ತು. ಅದರಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಹೊಂದಿದ್ದ ನಾಗೇಂದ್ರ ಇಂದು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದು ಐದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ಎದುರಿಸಿದ್ದಾರೆ. ನಾಗೇಂದ್ರ ವಿಚಾರಣೆ ಬೆನ್ನಲ್ಲೇ, ಬಸನಗೌಡ ದದ್ದಲ್‌ ಸಹ ವಿಚಾರಣೆಗೆ ಹಾಜರಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ನಿಗಮಕ್ಕೆ ಸೇರಿದ 187 ಕೋಟಿ ರೂಪಾಯಿಯನ್ನು ಅದರ ಬ್ಯಾಂಕ್ ಖಾತೆಯಿಂದ ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆಗೆ ಶರಣಾಗಿದ್ದರು.

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಪ್ರಸ್ತಾವನೆ

ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕರಿಸಿದೆ. ಇದರಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸ್ವಕ್ಷೇತ್ರ ಮೆಡಿಕಲ್ ಕಾಲೇಜ್ ತರುವ ಯತ್ನಕ್ಕೆ ತೀವ್ರ ಹಿನ್ನೆಡೆಯಾಗಿದೆ. ರಾಜ್ಯದಲ್ಲಿ ಐದು ಕಡೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಮೂರಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ. ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಮತ್ತೊಂದೆಡೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಸ್ತಾವನೆ ನೀಡಿದೆ.

ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ನೀಡುವಂತೆ ಹೈಕೋರ್ಟ್‌ ಗೆ ದರ್ಶ್ ಮನವಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ನೀಡುವಂತೆ ಹೈಕೋರ್ಟ್‌ ಗೆ ಮನವಿ ಮಾಡಿದ್ದಾರೆ. ಸದ್ಯ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ-ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ.

ಸನ್ನಡತೆ ಆಧಾರದ ಮೇಲೆ 77 ಕೈದಿಗಳ ಬಿಡುಗಡೆ

ರಾಜ್ಯದ ವಿವಿಧ ಜೈಲುಗಳಲ್ಲಿರುವ 77 ಕೈದಿಗಳನ್ನು ಮಂಗಳವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು. ಸನ್ನಡತೆ ಆಧಾರದ ವರ್ಷದಲ್ಲಿ ಮೂರು ಬಾರಿ ಜೈಲಿನ ಕೈದಿಗಳನ್ನು ಬಿಡುಗಡೆಗೊಳಿಸುವ ಆದೇಶದನ್ವಯ, ರಾಜ್ಯ ಸರ್ಕಾರದ ಶಿಫಾರಸಿನ ಮೇರೆಗೆ 77 ಕೈದಿಗಳನ್ನು ಅವಧಿಪೂರ್ವ ಬಿಡುಗಡೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಇನ್ನುಮುಂದೆ ಸನ್ನಡತೆ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ಬದಲು ಮೂರು ಬಾರಿ ಕೈದಿಗಳನ್ನು ಬಂಧಮುಕ್ತಗೊಳಿಸಲಾಗುವುದು ಎಂದರು. ಈಗ ವರ್ಷಕ್ಕೆ ಎರಡು ಬಾರಿ ಸ್ವಾತಂತ್ರ್ಯೋತ್ಸವದ ವೇಳೆ ಮತ್ತು ಗಣರಾಜ್ಯೋತ್ಸವದ ವೇಳೆ ಮಾತ್ರ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 23 ಚಾಲಕ ವಿರುದ್ಧ ಪ್ರಕರಣ ದಾಖಲು

ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸುತ್ತಿದ್ದ 23 ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಇಂದು ಪ್ರಕರಣ ದಾಖಲಿಸಿದ್ದಾರೆ. ಬೆಳಗ್ಗೆ 7 ರಿಂದ 9ರವರೆಗೆ ನಡೆಸಿದ ವಿಶೇಷ ಅಭಿಯಾನದಲ್ಲಿ ಒಟ್ಟು 3016 ಶಾಲಾ ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 23 ಚಾಲಕರಿಗೆ ಮದ್ಯಪಾನ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ 23 ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗಿದೆ ಮತ್ತು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರ ಚಾಲನಾ ಪರವಾನಗಿಯನ್ನು ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ರವಾನಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂಎನ್ ಅನುಚೇತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video