ನವದೆಹಲಿ: ಪವರ್ ಟಿವಿ ಎಂಬ ಕನ್ನಡ ಸುದ್ದಿ ವಾಹಿನಿಯ ಪ್ರಸಾರಕ್ಕೆ ನಿರ್ಬಂಧ ವಿಧಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ರವರೆಗೆ ಸೋಮವಾರ ವಿಸ್ತರಿಸಿದೆ.
ಸಾಲಿಸಿಟರ್ ಜನರಲ್(ಎಸ್‌ಜಿ) ತುಷಾರ್ ಮೆಹ್ತಾ ಅವರು ವಿದೇಶಕ್ಕೆ ಹೋಗಿದ್ದಾರೆ ಮತ್ತು ವಾದ ಮಂಡಿಸಲು ಅವರು ಭಾರತದಲ್ಲಿ ಇಲ್ಲ ಎಂದು ಕೇಂದ್ರ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿಕ್ರಮ್‌ಜಿತ್ ಬ್ಯಾನರ್ಜಿ ಅವರು ನೀಡಿದ ಮಾಹಿತಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದಾಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಜುಲೈ 22 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಿದೆ.
ಏತನ್ಮಧ್ಯೆ, ಕರ್ನಾಟಕ ಹೈಕೋರ್ಟ್‌ನ ತೀರ್ಪಿಗೆ ತಡೆಯಾಜ್ಞೆ ನೀಡಿದ್ದ ಜುಲೈ 12 ರ ಆದೇಶವು ಜಾರಿಯಲ್ಲಿರುತ್ತದೆ ಎಂದು ಪೀಠ ಹೇಳಿದೆ.
ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ ಪ್ರಸಾರಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಈ ಆದೇಶಕ್ಕೆ ಜುಲೈ 12 ರಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.