ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
"ರಾಜ್ಯದ ಎಲ್ಲಾ ಖಾಸಗಿ ಉದ್ಯಮಗಳಲ್ಲಿ 'ಸಿ ಮತ್ತು ಡಿ' ದರ್ಜೆಯ ಹುದ್ದೆಗಳಿಗೆ ಶೇಕಡಾ 100 ರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ಮಸೂದೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡಿಗರು ತಮ್ಮ ರಾಜ್ಯದಲ್ಲಿ ನೆಮ್ಮದಿಯ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಮತ್ತು ಕನ್ನಡ ನೆಲದಲ್ಲಿ ಉದ್ಯೋಗದಿಂದ ಯಾರೂ ವಂಚಿತರಾಗಬಾರದು ಎಂಬುದು ತಮ್ಮ ಸರ್ಕಾರದ ಆಶಯವಾಗಿದೆ ಎಂದು ಸಿಎಂ ಹೇಳಿದ್ದಾರೆ.
ನಮ್ಮದು ಕನ್ನಡ ಪರ ಸರ್ಕಾರ, ಕನ್ನಡಿಗರ ಹಿತ ಕಾಪಾಡುವುದು ನಮ್ಮ ಆದ್ಯತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾನೂನು ಇಲಾಖೆಯ ಮೂಲಗಳ ಪ್ರಕಾರ ಗುರುವಾರ ವಿಧಾನಸಭೆಯಲ್ಲಿ ಈ ಮಸೂದೆ ಮಂಡನೆಯಾಗಲಿದೆ.
ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕುರಿತು ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.
'ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.