ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಹಲವಾರು ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಬುಧವಾರ ಭರವಸೆ ನೀಡಿದರು.
ರೈಲ್ವೆ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ವಿ ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆ ಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಉನ್ನತ ಮಟ್ಟದ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಹೇಳಿದರು.
ಕಳೆದ 40 ವರ್ಷಗಳಿಂದ ಮಂಗಳೂರಿನ ರೈಲ್ವೆ ಅಭಿವೃದ್ಧಿ ಕುಂಠಿತವಾಗಿದ್ದು, ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು. ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಂಗಳೂರು ಮತ್ತು ಕಾರವಾರ ವಿಭಾಗದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ.
ಈ ನಿಟ್ಟಿನಲ್ಲಿ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಟ್ಟುಗೂಡಿಸಿ ಎರಡು ತಿಂಗಳೊಳಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದರು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯ ಕೊರತೆ ಕಂಡು ಬರುತ್ತಿದೆ ಎಂದ ಸಚಿವರು, "ನಾವು ಸಾಮಾನ್ಯವಾಗಿ ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಕರಾವಳಿಯಲ್ಲಿ ರೈಲ್ವೆ ನೆಟ್‌ವರ್ಕಿಂಗ್‌ಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯನ್ನು ಯೋಜಿಸುತ್ತಿದ್ದೇವೆ" ಎಂದು ಹೇಳಿದರು.
ಕರಾವಳಿ ರೈಲ್ವೆ ಮೂಲಸೌಕರ್ಯಗಳ ಪರಿಶೀಲನಾ ಸಭೆಯಲ್ಲಿ, ಕರಾವಳಿ ರೈಲ್ವೆ ಅಭಿವೃದ್ಧಿ, ವಿಸ್ತರಣೆ ಮತ್ತು ಕರಾವಳಿ ಪ್ರದೇಶದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸುವ ಒಂದು ಪ್ರತೇಕ ವಲಯ ಹೊಂದುವುದು ಉತ್ತಮ ಎಂದು ಸಚಿವರು ಸೂಚಿಸಿದ್ದಾರೆ.
ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೆ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.