ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮತ್ತು ನಿರಂತರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ(IMD) ಜುಲೈ 20ರ ವರೆಗೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಮುಂದಿನ 24 ಗಂಟೆಯೊಳಗೆ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದ ಪ್ರಭಾವದಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಜುಲೈ 19 ಮತ್ತು 20 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 20 ಹಾಗೂ 21 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿಮಳೆ ಇದೇ ರೀತಿ ಮುಂದುವರಿದರೆ ಕಾವೇರಿ ಜಲಾಶಯವು ಮೂರು ದಿನಗಳಲ್ಲಿ ತನ್ನ ಪೂರ್ಣ ಸಾಮರ್ಥ್ಯವನ್ನು ತಲುಪುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಡಿಎನ್‌ಎಂಸಿ) ಗಮನಿಸಿದೆ. ಹಾರಂಗಿ ಮತ್ತು ಕಬಿನಿ ಜಲಾಶಯಗಳು ಈಗಾಗಲೇ ಪೂರ್ಣ ಸಾಮರ್ಥ್ಯವನ್ನು ತಲುಪಿವೆ.
ಐಎಂಡಿ ವರದಿ ಆಧರಿಸಿ ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಕಳೆದ ಎರಡು ದಿನಗಳಿಂದ ಈ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಶಾಲಾ- ಕಾಲೇಜುಗಳಿಗೆ ರಜೆ
ಕೊಡಗು ಮತ್ತು ಉಡುಪಿ ಎರಡೂ ಜಿಲ್ಲೆಗಳ ಜಿಲ್ಲಾಡಳಿತವು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೂ ರಜೆ ಘೋಷಿಸಲಾಗಿದೆ.
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.