ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಸಂಬಂಧ ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸ ರಾಜ್ಯಪಾಲರನ್ನು ಭೇಟಿ ಮಾಡಿ, ಅಧಿವೇಶನದಲ್ಲಿ ಅಂಗೀಕಾರವಾದ ಹಲವು ವಿಧೇಯಕಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಿದರು.
ವಿಧಾನಸಭೆಯಲ್ಲಿಂದು ಕೆಲವು ವಿಧೇಯಕಗಳನ್ನು ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿನದ ಕಾರ್ಯಕಲಾಪಗಳು ಮುಗಿದ ನಂತರ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು.
ಸುಮಾರು 8 ನಿಮಿಷಗಳ ಕಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸಿದ್ದರಾಮಯ್ಯ ಅಲ್ಲಿಂದ ನಿರ್ಗಮಿಸಿದರು.
ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಪು ಸದನದಲ್ಲಿ ಅಂಗೀಕಾರವಾದ ಮೂರು ವಿಧೇಯಕಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಕೈಗೊಂಡಿರುವ ಮೂರು ನಿರ್ಣಯಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆಂದು ತಿಳಿದುಬಂದಿದೆ. ಇದಲ್ಲದೆ, ಸದನದಲ್ಲಿ ನಡೆಯುತ್ತಿರುವ ಕಾರ್ಯಕಲಾಪದ ವಿವರ ಮತ್ತು ಬೆಳವಣಿಗೆಗಳನ್ನು ಕೂಡ ರಾಜ್ಯಪಾಲರಿಗೆ ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಗಳಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಬಗ್ಗೆ ಕಾಂಗ್ರೆಸ್ ಸರ್ಕಾರ ಗಂಭೀರ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.
ಬಿಜೆಪಿ ಸಿಎಂ ರಾಜೀನಾಮೆಗೆ ಒತ್ತಾಯಿಸಿದರೆ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಇಡಿ ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಹೆಸರು ಹೇಳುವಂತೆ ರಾಜ್ಯ ಸರ್ಕಾರದ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಇಡಿ ವಿರುದ್ಧ ನಿನ್ನೆ ಪ್ರತಿಭಟನೆ ನಡೆಸಿದ್ದರು. ಆದರೆ, ರಾಜ್ಯಪಾಲರ ಜತೆ ಈ ಯಾವ ವಿಷಯಗಳೂ ಚರ್ಚೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ವಿಧೇಯಕಗಳ ಕುರಿತು ಸಿಎಂ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ಮಾಹಿತಿ ನೀಡಿವೆ.