ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಶುಕ್ರವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ಗುರುವಾರ ಹೇಳಿದ್ದಾರೆ.
“ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023, ಸೆಕ್ಷನ್ 17 ಎ, ಸೆಕ್ಷನ್ 218 ರ ಪ್ರಕಾರ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರ ಅನುಮತಿ ಪಡೆಯಲು ನಾನು ಶುಕ್ರವಾರ ಬೆಳಗ್ಗೆ 11.30ಕ್ಕೆ ರಾಜಭವನದಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುತ್ತೇನೆ ಎಂದು ಅಬ್ರಹಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಮೈಸೂರಿನ ವಿಜಯನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಪರಿಹಾರವಾಗಿ 14 ಪರ್ಯಾಯ ನಿವೇಶನಗಳನ್ನು 2022ರ ಜನವರಿ 5ರಂದು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪದ ಮೇಲೆ ಜುಲೈ 18ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ಅನುಮತಿ ಕೇಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಅಕ್ರಮ ನಿವೇಶನ ಹಂಚಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ರೂ.44.64 ಕೋಟಿ ರೂ. ನಷ್ಟವಾಗಿದೆ. ಈ ಅಕ್ರಮಗದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಪುತ್ರ ಯತೀಂದರ್, ಮುಡಾ ಆಯುಕ್ತ ಡಿಬಿ ನಟೇಶ್, ಮುಡಾ ಅಧ್ಯಕ್ಷ ಎಚ್‌ವಿ ರಾಜೀವ್, ಮೈಸೂರು ಉತ್ತರದ ಅಂದಿನ ಸಬ್‌ರಿಜಿಸ್ಟ್ರಾರ್ ಎಸ್‌ಕೆ ಸಿದ್ದಯ್ಯ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಅಬ್ರಹಾಂ ಆರೋಪಿಸಿದ್ದಾರೆ.