ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದೊಂದಿಗೆ ಚರ್ಚಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇಂದು 'ಬಾಗಿನ' ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮತನಾಡಿದ ಸಿಎಂ, ಕೇಂದ್ರವು ಅಗತ್ಯ ಅನುಮತಿ ನೀಡಿದರೆ, ರಾಜ್ಯವು ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಸಿದ್ಧವಾಗಿದೆ ಎಂದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಸಮಸ್ಯೆ ಇಲ್ಲ. ಆದರೂ ಅವರು ಚರ್ಚೆಗೆ ಸಿದ್ಧರಿಲ್ಲ. ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ. ಕೇಂದ್ರ ಸಚಿವ ಹಾಗೂ ಮಂಡ್ಯ ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಸಿಎಂ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪ ಮಾಡಿ, ರಾಜ್ಯದ ಜನರಿಗೆ ತಪ್ಪು ಸಂದೇಶ ನೀಡುವ ಉದ್ದೇಶದಿಂದ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಲು ಹೊರಟಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತ್ತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಯಾವುದೇ ರೀತಿಯಲ್ಲು ಕಾನೂನು ಬಾಹಿರವಾಗಿ ನಡೆಯದೇ ಇರುವ ಪ್ರಕರಣವನ್ನು ಜನರಿಗೆ ಪಾದಯಾತ್ರೆ ಮಾಡುವ ಮೂಲಕ ತಪ್ಪು ಮಾಹಿತಿ ಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದರು. ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಆಗಸ್ಟ್ 3ರಿಂದ ಪಾದಯಾತ್ರೆ ಕೈಗೊಳ್ಳಲಿದ್ದು ಆಗಸ್ಟ್ 10ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಮಾಡಲಿದೆ.
ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನ ಪ್ರಶಾಂತ್ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಪ್ರಶಾಂತ್, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಐಟಿಪಿಎಲ್ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಮೆಜೆಸ್ಟಿಕ್ನಿಂದ ಕೆ.ಆರ್ ಸರ್ಕಲ್ ಮಾರ್ಗವಾಗಿ ಬೈಕ್ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದಿದೆ. ಅಲ್ಲದೇ ಲಾರಿ ನಿಲ್ಲಿಸದೇ ಸುಮಾರು 10 ಮೀಟರ್ನಷ್ಟು ದೂರಕ್ಕೆ ಬೈಕ್ ಸವಾರರನ್ನ ಎಳೆದೊಯ್ದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಪಘಾತ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ.
ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ರಾಜ್ಯ ಬಿಜೆಪಿ ನಾಯಕರು ನಾಳೆಯಿಂದ ಭೇಟಿ ನೀಡುವ ಉದ್ದೇಶದಿಂದ ಆರು ತಂಡಗಳನ್ನು ರಚಿಸಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ. ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ, ಅರಗ ಜ್ಞಾನೇಂದ್ರ ತಂಡ ಶಿವಮೊಗ್ಗದಲ್ಲಿ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ತಂಡ ಕೊಡಗು- ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಛಲವಾದಿ ನಾರಾಯಣಸ್ವಾಮಿ ತಂಡ ರಾಯಚೂರು, ಯಾದಗಿರಿಯಲ್ಲಿ, ಅರವಿಂದ್ ಬೆಲ್ಲದ್ ತಂಡ ಬಾಗಲಕೋಟೆ, ವಿಜಯಪುರ ಹಾಗೂ ಬಿ.ಶ್ರೀರಾಮುಲು ತಂಡ ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಪ್ರವಾಸ ಮಾಡಲಿದೆ.
ಉತ್ತಮ ಮಳೆಯಿಂದಾಗಿ ಎರಡು ವರ್ಷಗಳ ನಂತರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯ ಈ ವರ್ಷ ಸಂಪೂರ್ಣವಾಗಿ ಭರ್ತಿಯಾಗಿದೆ. ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಅನಂತರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ ಈ ವೇಳೆ ಉಪಸ್ಥಿತರಿದ್ದರು. ಈಮಧ್ಯೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಕುರಿತು ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಿಎಂ ಮಾಹಿತಿ ನೀಡುವ ಸಾಧ್ಯತೆ ಇದೆ. ಇದೇ ವೇಳೆ ಸಚಿವ ಸಂಪುಟ ಪುನರಚನೆ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.