ಮೈಸೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದೊಂದಿಗೆ ಚರ್ಚಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಆದರೆ ನೆರೆಯ ರಾಜ್ಯವು ತಮಗೆ "ಯಾವುದೇ ಸಮಸ್ಯೆ ಉಂಟುಮಾಡುವುದಿಲ್ಲ" ಎಂದು ಸಿಎಂ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ(ಕೆಆರ್‌ಎಸ್) ಜಲಾಶಯಕ್ಕೆ ಇಂದು 'ಬಾಗಿನ' ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮತನಾಡಿದ ಸಿಎಂ, ಕೇಂದ್ರವು ಅಗತ್ಯ ಅನುಮತಿ ನೀಡಿದರೆ, ರಾಜ್ಯವು ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಸಿದ್ಧವಾಗಿದೆ ಎಂದರು.
ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಸಮಸ್ಯೆ ಇಲ್ಲ. ಆದರೂ ಅವರು ಚರ್ಚೆಗೆ ಸಿದ್ಧರಿಲ್ಲ. ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಿದ್ಧ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವ ಹಾಗೂ ಮಂಡ್ಯ ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಎರಡು ದಿನದಲ್ಲಿ ತಮಿಳುನಾಡಿನ ಮೆಟ್ಟೂರು ಅಣೆಕಟ್ಟು ಭರ್ತಿಯಾಗುವ ನಿರೀಕ್ಷೆಯಿದ್ದು, ನಂತರ ಸಮುದ್ರಕ್ಕೆ ಸಾಕಷ್ಟು ನೀರು ಹರಿದು ಹೋಗುತ್ತದೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಹಕರಿಸುವಂತೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಇತ್ತೀಚೆಗೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದು, ಇದರಿಂದ ನೆರೆ ರಾಜ್ಯಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದರು.
ಮೇಕೆದಾಟು ಅಣೆಕಟ್ಟು ನಿರ್ಮಾಣವಾದರೆ ಕರ್ನಾಟಕಕ್ಕಿಂತ ಹೆಚ್ಚು ತಮಿಳುನಾಡಿಗೆ ಉಪಯೋಗವಾಗಲಿದೆ. ಈ ಅಣೆಕಟ್ಟೆಯಿಂದ 65 ಟಿಎಂಸಿ ನೀರು ಸಂಗ್ರಹಿಸಬಹುದಾಗಿದೆ. ಇದರಿಂದ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಮತ್ತು ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗುತ್ತದೆ. ಅಲ್ಲದೆ ಮಳೆ ಕೊರತೆಯಾದ ಸಂಕಷ್ಟದ ವರ್ಷದಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗಲಿದೆ ಎಂದರು.