ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್ಐಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕು ಎಂದು ಹೇಳಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ರಾತ್ರಿ ವೇಳೆ ಹೆಚ್ಚಾಗಿ ಅಳವಡಿಸುತ್ತಾರೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಒಂದು ಪ್ರಹರಿ ವಾಹನವನ್ನು ನಿಯೋಜಿಸಿ ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವ ಮೂಲಕ ಪರಿಶೀಲನೆ ಹಾಗೂ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಅಳವಡಿಸುವುದರ ಮೇಲೆ ನಿಗಾವಹಿಸಬೇಕು ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಕಾಲಮಿತಿಯೊಳಗಾಗಿ ಹಾಗೂ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ‘ರಸ್ತೆ ಗುಂಡಿ ಗಮನ’ ಮೊಬೈಲ್ ಅಫ್ಲಿಕೇಷನ್ ಅನ್ನು ಅನಾವರಣಗೊಳಿಸಿದ್ದು, ಅದರ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ತಂತ್ರಾಂಶದ ಮೂಲಕ ನಾಗರಿಕರಿಂದ ಬರುವ ದೂರುಗಳನ್ನು ತ್ವರಿತವಾಗಿ ಮುಚ್ಚಬೇಕು. ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ನಗರದಲ್ಲಿ ಸರಾಸರಿ 200 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಪ್ರತಿ ವಾರ್ಡ್‌ನಲ್ಲಿ ಔಷಧಿ ಸಿಂಪಡಿಸಲು ಸಿಬ್ಬಂದಿಯನ್ನು ನಿಯೋಜಿಸುವಂತೆ ಗಿರಿನಾಥ್ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ 30 ಸಕ್ರಿಯ ಹಾಟ್‌ಸ್ಪಾಟ್‌ಗಳಿದ್ದು, ಇಲ್ಲಿ ಬೇವಿನ ಎಣ್ಣೆ ಮತ್ತು DEET ಕ್ರೀಮ್ ವಿತರಿಸಲಾಗುತ್ತಿದೆ, ಕೊಳೆಗೇರಿ ಪ್ರದೇಶಗಳಲ್ಲಿಗಳಲ್ಲಿ. ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿಯಾಗುವ ಜಾಗದಲ್ಲಿ ಪದೇ ಪದೇ ಫಾಗಿಂಗ್ ಹಾಗೂ ಔಷಧ ಸಿಂಪರಣೆ ಮಾಡಬೇಕು ಎಂದು ಸೂಚಿಸಿದರು.
ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಶಿವಾನಂದ್ ಕಲ್ಕೆರೆ, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಶಿವಾನಂದ್ ಕಪಾಶಿ, ರಮೇಶ್, ಕರೀಗೌಡ, ಪ್ರೀತಿ ಗೆಹ್ಲೋಟ್, ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಪ್ರಧಾನ ಅಭಿಯಂತರರಾದ ಡಾ. ಪ್ರಹ್ಲಾದ್, ಮುಖ್ಯ ಅಭಿಯಂತರರು ಇದ್ದರು.