ಬೆಂಗಳೂರು: ಮಂಗಳವಾರ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್‌ರೂಂ ತೆರೆಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.
ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಲಿದ್ದು, ನಂತರದಲ್ಲಿ ಇವಿಎಂ ಮತಗಳ ಎಣಿಗೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಮೂರು ಮತ ಎಣಿಕೆ ಕೇಂದ್ರಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ರಮವಾಗಿ ಮಲ್ಯ ರಸ್ತೆ ಸೇಂಟ್ ಜೋಸೆಫ್ ಕಾಲೇಜು, ಜಯನಗರದ ಎಸ್.ಎಸ್.ಎಂ.ಆರ್.ವಿ ಕಾಲೇಜು, ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಅಭ್ಯರ್ಥಿಗಳ ಏಜೆಂಟರು ಬೆಳಗ್ಗೆ 6ಗಂಟೆಯೊಳಗೆ ಮತ ಎಣಿಕೆ ಕೇಂದ್ರಕ್ಕೆ ಬರುವಂತೆ ಸೂಚಿಸಲಾಗಿದೆ.
ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭಗೊಳ್ಳಲಿದೆ. ಪ್ರತಿ ಟೇಬಲ್‌ಗೆ ಸೂಕ್ಷ್ಮ ವೀಕ್ಷಕ, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳನ್ನು ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್‌ಗಳನ್ನು ಹಾಕಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಸುದ್ದಿಗಾರರಿಗೆ ಭಾನುವಾರ ಮಾಹಿತಿ ನೀಡಿದರು.
ಮೂರು ಲೋಕಸಭಾ ಕ್ಷೇತ್ರಗಳು - ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಸೆಂಟ್ರಲ್ - ಬಿಬಿಎಂಪಿ ಅಧಿಕಾರ ವ್ಯಾಪ್ತಿಗೆ ಬರುತ್ತವೆ. ಬಿಬಿಎಂಪಿ ವ್ಯಾಪ್ತಿಗೆ ಬರುವ ಮೂರು ವಿಧಾನಸಭೆ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತವೆ ಎಂದು ಗಿರಿನಾಥ್ ಹೇಳಿದರು. ಎಣಿಕೆ ಸಿಬ್ಬಂದಿ ಮಂಗಳವಾರ ಬೆಳಗ್ಗೆ ಕೇಂದ್ರ ತಲುಪುವವರೆಗೆ ಯಾವ ಟೇಬಲ್‌ಗೆ ನಿಯೋಜಿಸಲಾಗುತ್ತದೆ ಎಂಬುದು ತಿಳಿದಿಲ್ಲ ಎಂದು ಅವರು ಹೇಳಿದರು. ಗುರುತಿನ ಚೀಟಿ ನೀಡಿದವರಿಗೆ ಮಾತ್ರ ಮತ ಎಣಿಕೆ ಕೇಂದ್ರದ ಒಳಗೆ ಬಿಡಲಾಗುವುದು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳಿದ್ದು, ಕೊಠಡಿಗಳು ಸಾಕಷ್ಟು ದೊಡ್ಡದಿದ್ದರೆ, ಹೆಚ್ಚಿನ ಟೇಬಲ್‌ಗಳನ್ನು ಇರಿಸಲಾಗುತ್ತದೆ ಎಂದು ವಿವರಿಸಿದ್ದಾರೆ.
ಚುನಾವಣಾ ವೀಕ್ಷಕರು ಹಾಗೂ ಚುನಾವಣಾಧಿಕಾರಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರದ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಚುನಾವಣಾಧಿಕಾರಿಗಳು ತಮ್ಮ ಇಚ್ಛೆಯಂತೆ ಸಿಸಿಟಿವಿಗಳನ್ನು ಅಳವಡಿಸಿಕೊಳ್ಳಬಹುದು ಮತ್ತು ಎಣಿಕೆಯನ್ನು ವೀಡಿಯೊಗ್ರಾಫ್ ಮಾಡಬಹುದು ಎಂದು ಗಿರಿನಾಥ್ ಹೇಳಿದರು.