ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದ್ದು, 29 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ ಹೆಚ್ಚಾಗಿದೆ.
ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳ 14 ಸ್ಥಾನಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಮತ್ತು ಉತ್ತರ ಜಿಲ್ಲೆಗಳ 14 ಜಿಲ್ಲೆಗಳಲ್ಲಿ ಎರಡನೇ ಹಂತದ ಮತದಾನ ಮೇ 7ರಂದು ನಡೆದಿದೆ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ತಲಾ ಒಂದು ಮತ ಎಣಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ತುಮಕೂರಿನಲ್ಲಿ ಎರಡು ಸ್ಥಳಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 15 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್ಗೆ 1110 ಮತಗಳ ಮುನ್ನಡೆಯಾಗಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ. ಡಿಕೆ ಸುರೇಶ್ ವಿರುದ್ಧ 50,000 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಮುನ್ನಡೆ ಸಾಧಿಸಿದ್ದಾರೆ. ಶೋಭ ಕರಂದ್ಲಾಜೆ 13,538 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 6521 ಮತ ಪಡೆದಿದ್ದು ಶೋಭ ಕರಂದ್ಲಾಜೆ 7007 ಮತಗಳ ಅಂತರ ಕಾಯ್ದಿರಿಸಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು 8,624 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೆಗೌಡ ಅವರು 7,474 ಮತಗಳನ್ನು ಪಡೆದಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ವಿರುದ್ಧ 7008 ಮತಗಳ ಮುನ್ನಡೆ ಸಾಧಿಸಿದ್ದಾರೆ.