ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ತಿಳಿಸಿದ್ದಾರೆ.
ಪ್ರಕರಣದ ತನಿಖೆ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯಿಂದ ಔಪಚಾರಿಕ ಮನವಿ ಬಂದ ನಂತರ ಸಿಬಿಐ ತನಿಖೆಗೆ ಹಸ್ತಾಂತರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.
ಮುಂಬೈನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಛೇರಿ ಕಳೆದ ವಾರ ತನ್ನ ಎಂಜಿ ರೋಡ್ ಶಾಖೆಯನ್ನು ಒಳಗೊಂಡ ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ದೂರು ಸಲ್ಲಿಸಿತ್ತು. ಪ್ರಕರಣ ಸಂಬಂಧ ಅಲ್ಲದೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು.
ನಿಗಮದ 88 ಕೋಟಿ ರೂ. ಅಕ್ರಮ ವರ್ಗಾವಣೆ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉನ್ನತ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
"ಬ್ಯಾಂಕ್ ಸಿಬಿಐಗೆ ಪತ್ರ ಬರೆದಿದೆ, ಮೂರು ಕೋಟಿ ರೂ.ಗೂ ಹೆಚ್ಚು ಬ್ಯಾಂಕ್ ವಂಚನೆ ಪ್ರಕರಣ ಕಂಡುಬಂದರೆ ಸಿಬಿಐ ಸ್ವಯಂಪ್ರೇರಿತವಾಗಿ ತನಿಖೆ ನಡೆಸಬಹುದು ಎಂದು ಕೇಂದ್ರ ಸರ್ಕಾರದಲ್ಲಿ ನಿಯಮವಿದೆ. ಆದ್ದರಿಂದ ಬ್ಯಾಂಕ್ ಬರೆದ ಪತ್ರದ ಆಧಾರದ ಮೇಲೆ ಸಿಬಿಐ ಪ್ರಕರಣದ ತನಿಖೆಗೆಯನ್ನು ಕೈಗೆತ್ತಿಕೊಂಡಿದೆ ಎಂದು ಪರಮೇಶ್ವರ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಲ್ಲದೆ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಎಲ್ಲ ಸಹಕಾರ ನೀಡಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.