ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ. ಪ್ರಕರಣದ ತನಿಖೆ ಸಂಬಂಧ ಸಿಬಿಐನಿಂದ ಔಪಚಾರಿಕ ಮನವಿ ಬಂದ ನಂತರ ಸಿಬಿಐ ತನಿಖೆಗೆ ಹಸ್ತಾಂತರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ. ಮುಂಬೈನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಛೇರಿ ಕಳೆದ ವಾರ ತನ್ನ ಎಂಜಿ ರೋಡ್ ಶಾಖೆಯು ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ದೂರು ಸಲ್ಲಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸಹಕಾರ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಎಂಬುವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಾಲ್ಮೀಕಿ ನಿಗಮದ ಅಧಿಕೃತ ಬ್ಯಾಂಕ್ ಖಾತೆಯಿಂದ ಹೈದರಾಬಾದ್ ಸಹಕಾರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ್ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಹಿನ್ನೆಲೆಯಲ್ಲಿ ಈ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಉತ್ತರಾಖಂಡದ ಹಿಮಾಲಯ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದ ಚಾರಣಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ರಚಿಸಿದ್ದು ಅವರನ್ನು ಮರಳಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ಮೇ 29ರಂದು ಉತ್ತರಕಾಶಿಯಿಂದ 35 ಕಿಮೀ ದೂರದ ಚಾರಣಕ್ಕೆ 22 ಸದಸ್ಯರ ಟ್ರೆಕ್ಕಿಂಗ್ ತಂಡವನ್ನು ಮನೇರಿಯ ಹಿಮಾಲಯನ್ ವ್ಯೂ ಟ್ರೆಕ್ಕಿಂಗ್ ಏಜೆನ್ಸಿ ಕಳುಹಿಸಿತ್ತು. ಈ ತಂಡದಲ್ಲಿ ಕರ್ನಾಟಕದ 18 ಮಂದಿ ಸೇರಿದ್ದಾರೆ. ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಲುಕಿರುವವರ ರಕ್ಷಣ ಕಾರ್ಯಾಚರಣೆ ನಡೆಯುತ್ತಿರುವಾಗಲೇ ನಾಲ್ವರು ಚಾರಣಿಗರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ತಿಳಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನೂ ಲಭ್ಯವಾಗಿಲ್ಲ. ಈ ಮಧ್ಯೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ಡೆಹ್ರಾಡೂನ್‌ಗೆ ತೆರಳಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರದ ಕಂದವಾರದಲ್ಲಿರುವ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಲೋಕಸಭೆ ಚುನಾವಣೆಯಲ್ಲಿ NDA ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಬಂದಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ NDA ಮೈತ್ರಿಕೂಟದ ಪಕ್ಷಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. ಮೈತ್ರಿ ಪಕ್ಷಗಳು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಗೆ ಬೆಂಬಲ ನೀಡಿವೆ. ಮೈತ್ರಿಕೂಟದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಹ ನವದೆಹಲಿಗೆ ತೆರಳಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕುಮಾರಸ್ವಾಮಿ ಅವರು ಕೃಷಿ ಖಾತೆಗಾಗಿ ಬೇಡಿಕೆ ಇಡುವ ಸಾಧ್ಯತೆ ಹೆಚ್ಚಿದೆ.
ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್ ಚೈಲ್ಡ್ ರವಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು ಕುಡಿಯುವ ನೀರು ತರಲೆಂದು ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಕಾರಿನಲ್ಲಿ ಬಂದು ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಮಚ್ಚಿನಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2 ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದನು.