ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಜೂನ್ 18ರವರೆಗೆ ಮತ್ತೆ ವಿಶೇಷ ತನಿಖಾ ತಂಡದ(ಎಸ್‌ಐಟಿ) ಕಸ್ಟಡಿಗೆ ಒಪ್ಪಿಸಿ ಬುಧವಾರ ಆದೇಶಿಸಿದೆ.
ನ್ಯಾಯಾಲಯವು ಜೂನ್ 10 ರಂದು ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದರೆ ಸೈಬರ್ ಕ್ರೈಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಂದು ಅವರ ವಿರುದ್ಧ ಬಾಡಿ ವಾರೆಂಟ್ ಕೋರಿ ಅರ್ಜಿ ಸಲ್ಲಿಸಿತ್ತು.
ವಿಚಾಣೆ ನಡೆಸಿದ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಎಸ್‌ಐಟಿ ಮನವಿಯನ್ನು ಪುರಸ್ಕರಿಸಿದೆ. ಇದರೊಂದಿಗೆ ಎಸ್‌ಐಟಿ ಮಂಗಳವಾರದವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿದೆ.
ಮೇ 31 ರಂದು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ ನಂತರ ನ್ಯಾಯಾಲಯವು ಜೂನ್ 6 ರವರೆಗೆ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿತ್ತು. ನಂತರ ಅದನ್ನು ಜೂನ್ 10 ರವರೆಗೆ ವಿಸ್ತರಿಸಿತು.
ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದ ಪ್ರಜ್ವಲ್ ರೇವಣ್ಣ ಮೇ 31 ರಂದು ಜರ್ಮನಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.