ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ಸಹಯೋಗದಲ್ಲಿ ಇಂದು ನಡೆದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು,
ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.
ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪಾಟೀಲ್ ಹೇಳಿದರು. ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಹೋಮಿಯೋಪತಿ ಹಾಗು ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಸಚಿವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು,
ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗು ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದರು.