ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದ್ದು, ಇಂಧನ ಬೆಲೆಯೂ ಏರಿಕೆಯಾಗಲಿದೆ. ಸರ್ಕಾರದ ನಿರ್ಧಾರದಿಂದ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಲಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ.29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ. ಆದರೆ, ಈ ಹಿಂದೆ ನೀಡಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯ ಜೂ.20 ವರೆಗೆ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ದರ್ಶನ್ ಹಾಗೂ ಇತರೆ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಅವಧಿ ನಾಳೆ ಭಾನುವಾರಕ್ಕೆ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಮತ್ತೆ 9 ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳನ್ನು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.
ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಂದು ರಾಜ್ಯದಲ್ಲಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇತ್ತೀಚೆಗೆ ಸಂಸದರಾಗಿ ಆಯ್ಕೆಯಾಗಿ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಚ್ ಡಿ ಕುಮಾರಸ್ವಾಮಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಚನ್ನಪಟ್ಟಣ ಕ್ಷೇತ್ರವನ್ನು ವಿಧಾನಸಭೆಗೆಯಲ್ಲಿ ಪ್ರತಿನಿಧಿಸುತ್ತಿದ್ದರು.ಇನ್ನು ಹಾವೇರಿ ಸಂಸದರಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ, ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.