ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಪಬ್ ಒಂದರಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೊತೆ ಪಾರ್ಟಿ ಮಾಡಿದ್ದಾರೆ ಎಂಬ ಕಾರಣಕ್ಕೆ ನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದರು.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಸ್ಟೋನಿ ಬ್ರೂಕ್ ಪಬ್ ಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಇದೇ ಪಬ್ ನಲ್ಲಿ ನಡೆದ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದ್ದರಿಂದ ಇಂದು ಚಿಕ್ಕಣ್ಣರನ್ನು ಸಹ ಪಬ್ ಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದರು.
ನಂತರ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಚಿಕ್ಕಣ್ಣನನ್ನು ಕರೆತಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಚಿಕ್ಕಣ್ಣ ತನ್ನ ಜೊತೆ ಗರಡಿ ಚಿತ್ರದ ನಟ ಯಶಸ್ ಸೂರ್ಯ ಸಹ ಬಂದಿದ್ದರು ಎಂದು ಹೇಳಿದ್ದಾರೆ. ಹೀಗಾಗಿ ಸದ್ಯ ಪೊಲೀಸರು ಯಶಸ್ ಸೂರ್ಯಗೆ ನೋಟಿಸ್ ನೀಡುವ ಸಾಧ್ಯತೆ ಇದೆ.
ಇನ್ನು ಪ್ರಕರಣದಲ್ಲಿ ಪೊಲೀಸರು ಚಿಕ್ಕಣ್ಣರನ್ನು ಸಾಕ್ಷಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.