ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಮೂರನೇ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ 42 ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು.
ಮೂರನೇ ಅತ್ಯಾಚಾರ ಪ್ರಕರಣದ ವಿಚಾರಣೆ ಇದಾಗಿದ್ದು, ಈ ಕೇಸ್‌ನಲ್ಲಿ ಎಸ್‍ಐಟಿ ಅಧಿಕಾರಿಗಳು 5 ದಿನಗಳ ಕಸ್ಟಡಿ ಮುಕ್ತಾಯ ಹಿನ್ನೆಲೆ ಇಂದು ಕೋರ್ಟ್ ಗೆ ಹಾಜರುಪಡಿಸಿದರು. ವಿಶೇಷ ತನಿಖಾ ತಂಡ ಮತ್ತೆ ಕಸ್ಟಡಿಗೆ ಕೋರದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರ್ ತೀರ್ಪು ಪ್ರಕಟಿಸಿದರು.ಈ ಪ್ರಕರಣದಲ್ಲಿ ಜುಲೈ 8ವರೆಗೆ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿರಲಿದ್ದಾರೆ.
ಲೋಕಸಭಾ ಸದಸ್ಯರಾಗಿದ್ದಾಗ ಸಂಸದರ ನಿವಾಸದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿತ್ತು ಎಂದು ಸಂತ್ರಸ್ಥೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ದೂರು ನೀಡಿದ್ದರು.