ರಾಜ್ಯ

ಹಾವೇರಿ ಅಪಘಾತ: ಭಾರತದ ಅಂಧರ ಫುಟ್ ಬಾಲ್ ತಂಡದ ಕ್ಯಾಪ್ಟನ್ ನಿಧನ, ವಾಲ್ಮೀಕಿ ನಿಗಮ ಹಗರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಪ್ರೀತಂ ಗೌಡಗೆ ರಿಲೀಫ್: ಇವು ಇಂದಿನ ಪ್ರಮುಖ ಸುದ್ದಿಗಳು 28-06-2024

ಹಾವೇರಿ ಅಪಘಾತ: 13 ಮಂದಿ ಸಾವು

ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 13 ಮಂದಿ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಬ್ಯಾಡಗಿ ಕ್ರಾಸ್ ಬಳಿಯ ಗುಂಡೇನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್‌ನ ಚಾಲಕ ತನ್ನ ವಾಹನವನ್ನು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸಂತ್ರಸ್ತರು ಚಿಂಚೋಳಿ ಮಾಯಮ್ಮ ದೇವಸ್ಥಾನದಿಂದ ಶಿವಮೊಗ್ಗ ಜಿಲ್ಲೆಯ ಯೆಮೆಹಟ್ಟಿ ಗ್ರಾಮಕ್ಕೆ ಹೋಗುತ್ತಿದ್ದರು. ಈ ಅಪಘಾತದಲ್ಲಿ ಭಾರತದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಮಾನಸ ಸಹ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ.

ದೆಹಲಿಯಲ್ಲಿ ಸಂಸದರು- ಕೇಂದ್ರ ಸಚಿವರನ್ನುಭೇಟಿ ಮಾಡಿದ ಸಿಎಂ

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರು ಹಾಗೂ ಸಂಸದರ ಜೊತೆ ಸಭೆ ನಡೆಸಿದ್ದು, ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಹಿತದೃಷ್ಟಿಯಿಂದ ಸಂಸದರೆಲ್ಲರೂ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿರುವ ಸಿಎಂ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ. ಮೇಕೆದಾಟು ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಬೇಕಿರುವ 5,300 ಕೋಟಿ ರೂ. ಕೊಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ, ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ನೀಡಬೇಕೆಂಬ ಪ್ರಸ್ತಾವನೆಯನ್ನೂ ಸಿಎಂ ಕೇಂದ್ರ ಸಚಿವರೊಂದಿಗಿನ ಸಭೆಯಲ್ಲಿ ಸಲ್ಲಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿರುವ ಹಗರಣದ ವಿಚಾರವಾಗಿ ಬಿಜೆಪಿ ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು. ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಾಜ್ಯ ಸರ್ಕಾರ ಹಗರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ. ಹಗರಣ ಬಯಲಿಗೆಳೆಯಲು ಯತ್ನಿಸುತ್ತಿರುವ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಪ್ರಜ್ವಲ್ ಪ್ರಕರಣ: ಪ್ರೀತಂ ಗೌಡಗೆ ಬಂಧನದಿಂದ ರಿಲೀಫ್

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಹೈಕೋರ್ಟ್ ಬಂಧನದಿಂದ ರಕ್ಷಣೆ ನೀಡಿದೆ. ವಿಡಿಯೋ ಹಂಚಿಕೆ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧ ಎಸ್ಐಟಿ ಪ್ರಕರಣ ದಾಖಲಿಸಿತ್ತು. ಇದೇ ಪ್ರಕರಣದಲ್ಲಿ ಪ್ರೀತಂ ಗೌಡ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿದೆ. ಬಂಧನ ಭೀತಿಯಲ್ಲಿ ಪ್ರೀತಂ ಗೌಡ ಅವರು ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು. ಆರೋಪಿಯ ವಿರುದ್ಧ ಎಸ್ಐಟಿ ತನಿಖೆ ಮುಂದುವರಿಸಬಹುದು. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

POCSOCase: ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿಗೆ ನೀಡಿರುವ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಸ್ತರಿಸಿದೆ. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠ ಹಿಂದಿನ ಆದೇಶವನ್ನು ಮುಂದುವರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಸಿಐಡಿ ಫಾಸ್ಟ್ ಟ್ರ್ಯಾಕ್ ಕೋರ್ಟ್ 1ರಲ್ಲಿ ಪೋಕ್ಸೊ ಕಾಯ್ದೆಯಡಿ ಚಾರ್ಜ್‌ಶೀಟ್ ಸಲ್ಲಿಸಿದೆ.

ಬಗರ್ ಹುಕುಂ ಅವ್ಯವಹಾರ: ಆರ್.ಅಶೋಕ್ ವಿರುದ್ಧ ತನಿಖೆಗೆ ಆಗ್ರಹ

ಬಗರ್ ಹುಕುಂ ಅಡಿಯಲ್ಲಿ ಫಲಾನುಭವಿಗಳಿಗೆ 2,500 ಎಕರೆ ಗೋಮಾಳದ ಹಂಚಿಕೆಯಲ್ಲಿ ಬಿಜೆಪಿ ನಾಯಕ ಆರ್. ಅಶೋಕ್ ಅವ್ಯವಹಾರ ನಡೆಸಿದ್ದಾರೆ. ಅವರ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ, ಎಂಎಲ್ ಸಿ ರಮೇಶ್ ಬಾಬು ಆಗ್ರಹಿಸಿದ್ದಾರೆ. ಅಶೋಕ್ ವಿರುದ್ಧ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸುದ್ದಿ ಮಾಧ್ಯಮಗಳಲ್ಲಿ ವರದಿ ಬರಬಾರದೆಂದು ಅವರು ತಡೆಯಾಜ್ಞೆ ತಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT