ಅಂಗನವಾಡಿ ಕಾರ್ಯಕರ್ತೆಯರ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಅಂಗನವಾಡಿ ಕಾರ್ಯಕರ್ತೆಯರ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ 
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Nagaraja AB

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದ ಬೇಡಿಕೆ ಆಲಿಸಿ ಮಾತನಾಡಿದ ಮುಖ್ಯಮಂತ್ರಿ, ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500 ಹಾಗೂ ಸಹಾಯಕಿಯರಿಗೆ ₹6,000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ. ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ 2,000 ರೂ.ಗಳನ್ನು ಮನೆ ಯಜಮಾನಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಒದಗಿಸಲಾಗುತ್ತಿದೆ. ಶೇ.60 ರಷ್ಟು ಅಂಗನವಾಡಿಯಲ್ಲಿ‌ ಕೆಲಸ ಮಾಡುವ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

SCROLL FOR NEXT