ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಹೆಚ್ ಡಿ ರೇವಣ್ಣ, ಜಾಮೀನು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ನಾಳೆ ಮಧ್ಯಾಹ್ನದ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು 5 ಲಕ್ಷ ರೂಪಾಯಿ ಬಾಂಡ್ ನೀಡಲು ಮಾಜಿ ಸಚಿವರಿಗೆ ಸೂಚನೆ ನೀಡಿದೆ. ನಾಳೆ ಮಧ್ಯಾಹ್ನ 3 ಗಂಟೆ ವೇಳೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.
ರೇವಣ್ಣ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ 47 ವರ್ಷದ ಮಹಿಳೆ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸಿಪುರ ಪೊಲೀಸ್ ಠಾಣೆಯಲ್ಲಿ ಏ.28 ರಂದು ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದರು.
ಗುರುವಾರದಂದು ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ SIT ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ರೇವಣ್ಣ ಅವರನ್ನು ವಶಕ್ಕೆ ನೀಡುವಂತೆ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದ ಸಂತ್ರಸ್ತ ಮಹಿಳೆಯೊಬ್ಬರ ಅಪಹರಣ ಆರೋಪದಲ್ಲಿ SIT ರೇವಣ್ಣ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರಾಗಿದೆ.