ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ.
ಹೌದು.. ನೇಹಾ ಹಿರೇಮಠ ಕೊಲೆ ಬೆನ್ನಲ್ಲೇ ನಡೆದ ಅಂಜಲಿ ಹತ್ಯೆ ಪ್ರಕರಣ (Anjali Murder Case) ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿತ್ತು. ಇಡೀ ರಾಜ್ಯಾದ್ಯಂತ ಈ ಘಟನೆ 2ನೇ ಬಾರಿಗೆ ರಾಜ್ಯ ಸರ್ಕಾರವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿತ್ತು. ಇದೀಗ ಐಪಿಎಸ್ ಅಧಿಕಾರಿಯ ತಲೆದಂಡವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ್ದರಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನೂ ಅಮಾನತುಗೊಂಡಿದ್ದಾರೆ.
ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹ ಸಚಿವರು ಹುಬ್ಬಳ್ಳಿಗೆ ಭೇಟಿ ನೀಡುವ ಮುನ್ನಾ ಅಮಾನತು ಆದೇಶ ಹೊರಬಿದ್ದಿದ್ದು, ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಕ್ರಮವಾಗಿದೆ.
ಅಂಜಲಿ ಕೊಲೆ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಇತ್ತೀಚೆಗೆ ಆದೇಶ ಹೊರಡಿಸಿದ್ದರು.