ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಅವರು ಕಾಮಗಾರಿ ಬಿಲ್ ಪಾವತಿಸಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖಾ ತನಿಖೆಗೆ ಆದೇಶಿಸಿದ್ದು, ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ಗೆ ಸೂಚನೆ ನೀಡಿದ್ದಾರೆ.
ಪಿ.ಎಸ್. ಗೌಡರ್ (50) ಮೇ 26 ರಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಹೀಗೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.
ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೆ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.