ಬೆಂಗಳೂರು: ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ಪ್ರಶ್ನಿಸಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಶುಕ್ರವಾರ ಆರೋಪಿ ಶಾಸಕ ಎಚ್ ಡಿ ರೇವಣ್ಣ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.
ಇನ್ನುಮಹಿಳೆ ಅಪಹರಣ ಆರೋಪದಡಿ ತಮ್ಮ ವಿರುದ್ಧ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಎಸ್‌ಐಟಿ ಮತ್ತು ದೂರುದಾರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಎಸ್‌ಐಟಿ ಹಾಗೂ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠ ನೋಟಿಸ್ ಜಾರಿ ಮಾಡಿದೆ.
ಮೇ 13 ರಂದು ರೇವಣ್ಣ ಅವರಿಗೆ ಜಾಮೀನು ನೀಡುವಾಗ, ವಿಶೇಷ ನ್ಯಾಯಾಲಯವು ರೇವಣ್ಣ ವಿರುದ್ಧ ಹೊರಿಸಲಾದ ಅಪಹರಣದ ಆರೋಪಗಳನ್ನು ಸಾಬೀತುಪಡಿಸಲು ಎಸ್‌ಐಟಿ ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ಹೇಳಿದೆ.
ಇದನ್ನು ಉಲ್ಲೇಖಿಸಿ ಎಸ್‌ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿರುವ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು, ಆರೋಪಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 364(ಎ) ಅಡಿ ಕೇಸ್ ದಾಖಲಾಗಿದೆ. ವಿಶೇಷ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿರುವುದು ಗಂಭೀರ ತಪ್ಪು ಎಂದು ವಾದಿಸಿದರು.
ಈ ಸಂಬಂಧ ನ್ಯಾಯಮೂರ್ತಿ ದೀಕ್ಷಿತ್ ಅವರು ಆರೋಪಿ ರೇವಣ್ಣ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ರೇವಣ್ಣ ಪ್ರಕರಣಕ್ಕೆ ಸಂಬಂದ ಎಸ್‌ಐಟಿ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿದ್ದು, ಎರಡೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಸೋಮವಾರ ವಿಚಾರಣೆ ನಡೆಸಬಹುದು ಎಂದು ಹೇಳಿದ್ದಾರೆ.