ಬೆಂಗಳೂರು: 402 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳಲ್ಲಿ PSI ನೇಮಕಾತಿ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಅಭ್ಯರ್ಥಿಗಳು ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ ಎಂದು ಪ್ರಸನ್ನ ಅವರು ಹೇಳಿದ್ದಾರೆ.