ಹಾವೇರಿ: ರಾಜ್ಯಾದ್ಯಂತ ಮಳೆ ಆರ್ಭಟ ಜೋರಾಗಿರುವಂತೆಯೇ ಹಾವೇರಿಯಲ್ಲಿ ಸುರಿದ ಭಾರೀ ಮಳೆಯಿಂದ 12 ವರ್ಷದ ಬಾಲಕನೋರ್ವ ಚರಂಡಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಗುರುವಾರ ಅಮಾನತು ಮಾಡಲಾಗಿದೆ.
ಘಟನೆಗೆ ಸಂಬಂಧಸಿದಂತೆ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್.ಮುಂಜೋಜಿ ಮತ್ತು ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.
ಚರಂಡಿ ಮೇಲಿನ ಕಲ್ಲು ಮುಚ್ಚದೇ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಈ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿದ್ದಾರೆ.
ನಿನ್ನೆ ರಾತ್ರಿ ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಈ ವೇಳೆ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ರಸ್ತೆ ಕಾಣದೆ ಚರಂಡಿಯಲ್ಲಿ 12 ವರ್ಷದ ಬಾಲಕ ನಿವೇದನ್ ಬಸವರಾಜ ಗುಡಗೇರಿ ಕೊಚ್ಚಿ ಹೋಗಿದ್ದ. ಬಳಿಕ ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ, ಚರಂಡಿಯಲ್ಲಿ ಬಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದರು. ಸತತ ಎರಡು ಗಂಟೆಗಳ ಕಾರ್ಯಚರಣೆ ಬಳಿಕ ಬಾಲಕ ಪತ್ತೆ ಆಗಿದ್ದ. ನಂತರ ಹಾವೇರಿ ಜಿಲ್ಲಾಸ್ಪತ್ರೆಗೆ ನಿವೇದನ್ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ.