ಮೈಸೂರು: ನೆರೆಯ ಕೇರಳ ರಾಜ್ಯದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯೂ ಆಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ವಾಗತ ಕೋರಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಸ್ವಾಗತಿಸುವ ವೇಳೆ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬುಧವಾರ (ಅ.23 ರಂದು) ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷ ಕೇರಳದ ಕಲ್ಪೆಟ್ಟಾದ ಹೊಸ ಬಸ್ ನಿಲ್ದಾಣದಿಂದ ರೋಡ್‌ಶೋ ಆಯೋಜಿಸಿದೆ.
11.45 ಕ್ಕೆ, ಪ್ರಿಯಾಂಕಾ ಗಾಂಧಿ ಕಲ್ಪೆಟ್ಟಾದ ಕೆಡಬ್ಲ್ಯೂಎ ಕಚೇರಿ ಎದುರು ಗುಡಲೈನಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಪ್ರಿಯಾಂಕಾ ಅವರು ಕಲ್ಪೆಟ್ಟಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಕಲ್ಪೆಟ್ಟಾ ಮೈಸೂರು ನಗರದಿಂದ 138.3 ಕಿಲೋಮೀಟರ್ ದೂರದಲ್ಲಿದೆ.
ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದಾರೆ. "ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ ಮತ್ತು ಅವರಿಗೆ ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಕಲ್ಪಿಸಿಕೊಳ್ಳಲಾರೆ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಅವರು ವಯನಾಡಿನ ಅಗತ್ಯತೆಗಳಿಗೆ ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗುತ್ತಾರೆ ಎಂಬ ನನಗೆ ವಿಶ್ವಾಸವಿದೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಸೇರುವಂತೆ ಜನತೆಗೆ ಕರೆ ನೀಡಿರುವ ರಾಹುಲ್ ಗಾಂಧಿ, "ಒಟ್ಟಾಗಿ, ವಯನಾಡ್ ನ್ನು ಪ್ರೀತಿಯಿಂದ ಪ್ರತಿನಿಧಿಸುವುದನ್ನು ಖಚಿತಪಡಿಸಿಕೊಳ್ಳೋಣ" ಎಂದು ಹೇಳಿದ್ದಾರೆ.