ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದರು. ಇದನ್ನು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಸೆಪ್ಟೆಂಬರ್ 24ರ ವಜಾಗೊಳಿಸಿತ್ತು.
ಸಿಎಂ ಸಿದ್ದರಾಮಯ್ಯ ಅವರು ಇಂದು ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಮತ್ತೊಂದು ಕಡೆ ಇಡಿ PMLA ಕಾಯ್ದೆಯಡಿ ECIR ದಾಖಲಿಸಿದೆ. ಇದು ಇತರ ಕೆಲವು ಬಲವಂತದ ಕ್ರಮಗಳ ಜೊತೆಗೆ ಸಿಎಂ ಮತ್ತು ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿ ಇದೆ.
ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.