ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜ್ಯ

ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ 25 ಮಂದಿ ಸಾವು; 1,05,937 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಿಎಂ ಸಿದ್ದರಾಮಯ್ಯ

ಅಕ್ಟೋಬರ್ 1 ರಿಂದ 25 ರವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ವಾಡಿಕೆಯಂತೆ 114 ಮಿ.ಮೀ. ಮಳೆಯಾಗುತಿತ್ತು. ರಾಜ್ಯದಲ್ಲಿ ಶೇ.58 ರಷ್ಟು ಅಧಿಕ ಮಳೆಯಾಗಿದೆ.

ಬೆಂಗಳೂರು: ಈ ವರ್ಷ ಮುಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ 25 ಮಂದಿ ಸಾವನ್ನಪ್ಪಿದ್ದು, ಅವರಿಗೆ ತುರ್ತು ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20 ಲಕ್ಷ ರೂ. ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಳೆ ಹಾನಿ ಕುರಿತು ಅಧಿಕಾರಿಗಳು ಮತ್ತು ಸಂಪುಟ ಸಹೋದ್ಯೋಗಿಗಳೊಂದಿಗಿನ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್‌ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ವಿವರಿಸಿದರು.

ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4 ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25 ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದೆ ಎಂದು ತಿಳಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 63,647 ಕೆರೆ, ಕಲ್ಯಾಣಿಗಳ ಅಭಿವೃದ್ದಿ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ. ಅತಿ ವೃಷ್ಟಿಯಿಂದಾಗಿ 12,553ಕಿಮೀ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ 1,106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ ಉಂಟಾಗಿರುವ ಹಾನಿ ಕುರಿತು ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು. ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಕ್ಟೋಬರ್ 1 ರಿಂದ 25 ರವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ವಾಡಿಕೆಯಂತೆ 114 ಮಿ.ಮೀ. ಮಳೆಯಾಗುತಿತ್ತು. ರಾಜ್ಯದಲ್ಲಿ ಶೇ.58 ರಷ್ಟು ಅಧಿಕ ಮಳೆಯಾಗಿದೆ. ಮುಂಗಾರು ಅವಧಿಯಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ ರಾಜ್ಯದಲ್ಲಿ 852 ಮಿ.ಮೀ ವಾಡಿಕೆ ಮಳೆಯಾಗುತಿತ್ತು. ಆದರೆ ಈ ಬಾರಿ 978 ಮಿ.ಮೀ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲಿ ಶೇ 15ರಷ್ಟು ಹೆಚ್ಚುವರಿ ಮಳೆಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯ 895. 62 ಸಾವಿರ ಮಿಲಿಯನ್ ಕ್ಯೂಬಿಕ್ (ಟಿಎಂಸಿ) ಅಡಿಯಿದ್ದು, ಪ್ರಸ್ತುತ ನೀರಿನ ಸಂಗ್ರಹ 871. 26 ಟಿಎಂಸಿ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 505. 81 ಟಿಎಂಸಿ ಇತ್ತು ಎಂದು ವಿವರಿಸಿದರು.

ಬೆಂಗಳೂರು ನಗರದಲ್ಲಿ ಈ ವರ್ಷ ಅಕ್ಟೋಬರ್‌ ತಿಂಗಳಲ್ಲಿ 275 ಮಿಮೀ ಮಳೆಯಾಗಿದ್ದು, ಇದು 3ನೇ ಅತಿ ಹೆಚ್ಚು ಮಳೆಯಾಗಿದೆ. 2005ರಲ್ಲಿ ಈ ಅವಧಿಯಲ್ಲಿ 407 ಮೀಮೀ ಮಳೆಯಾಗಿತ್ತು.ರಾಜಕಾಲುವೆಗಳ ಅತಿಕ್ರಮಣ ತೆರವು ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ವಿಶ್ವಬ್ಯಾಂಕ್‌ ಸಂಸ್ಥೆಯು ಬೆಂಗಳೂರು ನಗರದಲ್ಲಿ ಬಾಕಿ ಉಳಿದಿರುವ 173 ಕಿಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸುವ ಯೋಜನೆಗೆ ಹಾಗೂ 80 ಕಿಮೀ ಉದ್ದದ ಕಲ್ಲುಕಟ್ಟಡದ ರಾಜಕಾಲುವೆಗಳ ಸಬಲೀಕರಣ ಯೋಜನೆಗೆ ರೂ.2 ಸಾವಿರ ಕೋಟಿ ಆರ್ಥಿಕ ನೆರವು ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ.

ಈ ಯೋಜನೆಯ ವಿಸ್ತೃತ ಯೋಜನಾ ವರದಿಯ ಅಂದಾಜು ಪಟ್ಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಟೆಂಡರ್‌ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಮುಂದಿನ ವರ್ಷದ ಆರಂಭದ ಒಳಗಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ವತಿಯಿಂದ ರಾಜಕಾಲುವೆಗಳ ಕಿರು ಸೇತುವೆಗಳ ಅಗಲೀಕರಣ ಮತ್ತು ಕೆರೆಗಳ ಅಭಿವೃದ್ಧಿಗಾಗಿ ರೂ.275 ಕೋಟಿ ಕ್ರಿಯಾ ಯೋಜನೆ ಅನುಮೋದಿಸಲಾಗಿದೆ. ಕೆರೆಗಳಿಗೆ ರೂ.50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!