ಮಂಗಳೂರು: 2016ರಲ್ಲಿ 23 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಮಂಗಳೂರಿನ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಆರೋಪಿಯನ್ನು ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ ಕೆ ಮೊಗೇರ (38) ಎಂದು ಗುರುತಿಸಲಾಗಿದೆ. ಈತ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಬಗ್ಗೆ 2016ರ ಫೆ.25ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್. ವಿ. ಕಾಂತರಾಜು, ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿದ್ದಾರೆ.
ಮನೆಯಲ್ಲಿ ಒಬ್ಬಳೇ ಇದ್ದುದನ್ನು ತಿಳಿದ ಆರೋಪಿ ನೀರು ಕೇಳುವ ನೆಪದಲ್ಲಿ ಯುವತಿಯ ಮನೆಗೆ ತೆರಳಿ ಅತ್ಯಾಚಾರವೆಸಗಿದ್ದ ಮತ್ತು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಸಿದ್ದ. ಆ ನಂತರವೂ ಬೆದರಿಕೆ ಹಾಕಿ ಹಲವು ಬಾರಿ ಅತ್ಯಾಚಾರವೆಸಗಿದ್ದ.
ತಾನು ಗರ್ಭಿಣಿಯಾದ ವಿಷಯ ತಿಳಿದ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದಳು. ಅದರಂತೆ ಪ್ರಕರಣ ದಾಖಲಿಸಿದ್ದ ಅಂದಿನ ಇನ್ಸ್ ಪೆಕ್ಟರ್ ಅನಿಲ್ ಎಸ್ ಕುಲಕರ್ಣಿ ತನಿಖೆ ನಡೆಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ನ್ಯಾಯಾಲಯ 9 ಮಂದಿ ಸಾಕ್ಷಿದಾರರನ್ನು ವಿಚಾರಿಸಿ, 20 ದಾಖಲೆಗಳನ್ನು ಗುರುತಿಸಲಾಗಿತ್ತು. ಆರೋಪಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿದ ನ್ಯಾಯಾಧೀಶರು ಅತ್ಯಾಚಾರದ ಆರೋಪದಡಿಯಲ್ಲಿ 5,000 ರೂ.ಗಳ ದಂಡ ಮತ್ತು ಹೆಚ್ಚುವರಿ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಿಮಿನಲ್ ಬೆದರಿಕೆಗಾಗಿ 5,000 ರೂ.ಗಳ ದಂಡವನ್ನು ವಿಧಿಸಿದರು.
ದಂಡವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿ ಎರಡು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಸಂತ್ರಸ್ತೆಗೆ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪರಿಹಾರ ನೀಡುವಂತೆ ನ್ಯಾಯಾಲಯ ಶಿಫಾರಸು ಮಾಡಿದೆ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ವಾದ ಮಂಡಿಸಿದರು.