ಬೆಂಗಳೂರು: ಬಿಜೆಪಿ ರಾಜ್ಯ ಘಟಕವು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ಅಲ್ಪಸಂಖ್ಯಾತ ಸಮುದಾಯದ ಐದು ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯನ್ನು ಹೊಂದಿದೆ.
ಇತ್ತೀಚೆಗೆ ನಡೆದ ಕಾರ್ಯಾಗಾರದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಸಮುದಾಯ ಕೋಶಕ್ಕೆ ಈ ಗುರಿಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ ವಿವಿಧ ವಿಚಾರಗಳಲ್ಲಿ ಮುಸ್ಲಿಮರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಪರ ಎಂದು ಹೇಳಿಕೊಳ್ಳುತ್ತದೆ. ಆದರೆ, ಕರ್ನಾಟಕದಲ್ಲಿ ಈ ಸಮುದಾಯದಿಂದ ಎಷ್ಟು ಮಂದಿ ಸಿಎಂ ಆಗಿದ್ದಾರೆ ಎಂಬುದನ್ನು ಅರಿಯಬೇಕಿದೆ ಎಂದು ಹೇಳಿದ್ದಾರೆ.
ಮುಸ್ಲಿಂರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲು ಕಾಂಗ್ರೆಸ್ ಸಿದ್ಧವಿಲ್ಲ. ಕಾಂಗ್ರೆಸ್ ನಾಯಕರು ಮುಸ್ಲಿಂ ಕಾಲೋನಿಗಳಿಗೆ ಭೇಟಿ ನೀಡಲೇ ಇಲ್ಲ. ದಲಿತರನ್ನೂ ಅದೇ ರೀತಿ ನಡೆಸಿಕೊಂಡಿದ್ದಾರೆಂದು ಆರೋಪಿಸಿದರು.
ಬಿಜೆಪಿ ಯಾವುದೇ ಸಮುದಾಯದ ವಿರುದ್ಧ ಅಲ್ಲ. ದೇಶವನ್ನು ಸುರಕ್ಷಿತವಾಗಿಡುವುದು ನಮ್ಮ ಉದ್ದೇಶವಾಗಿದೆ. ಆದರೆ, ಮುಸ್ಲಿಮರಿಗೆ ಬಿಜೆಪಿ ಮೇಲೆ ನಂಬಿಕೆ ಇಲ್ಲ. ಇದು ಅವರ ಅಥವಾ ಬಿಜೆಪಿಯ ತಪ್ಪಲ್ಲ. ಅವರನ್ನು ಕಾಂಗ್ರೆಸ್ ದಾರಿ ತಪ್ಪಿಸಿದೆ. ಆದರೆ, ಮುಸ್ಲಿಮರು ಇದನ್ನು ಅರಿತುಕೊಳ್ಳದೇ ಇರುವುದು ದುರಾದೃಷ್ಟಕರ ಸಂಗತಿ ಎಂದು ಹೇಳಿದರು.
ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಬಿಜೆಪಿ ಕಳುಹಿಸುತ್ತದೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಕೇಂದ್ರದಲ್ಲಿ 2014ರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ನಡೆಸುತ್ತಿದೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಈ ವರೆಗೂ ಎಷ್ಟು ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಕಳುಹಿಸಿದೆ? ಎಂದು ಪ್ರಶ್ನಿಸಿದರು.
ಕಳೆದ ಬಾರಿಯ ಸದಸ್ಯತ್ವ ಅಭಿಯಾನದಲ್ಲಿ 1.05 ಕೋಟಿ ಸದಸ್ಯರ ಸೇರ್ಪಡೆಯಾಗಿದ್ದು, ಈ ಬಾರಿ 1.50 ಕೋಟಿ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯಿದೆ. ಅಲ್ಪಸಂಖ್ಯಾತ ಸಮುದಾಯಗಳಿಂದ ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸುವ ವಿಶ್ವಾಸವಿದೆ ಎಂದು ಇದೇ ವೇಳೆ ತಿಳಿಸಿದರು.
ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಪ್ರಕೋಷ್ಠದ ಸಂಚಾಲಕ ಅಲ್ಲಾ ಭಕ್ಷ ತಿಮ್ಮಾಪುರ ಮಾತನಾಡಿ, ಐದು ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿ ನೀಡಲಾಗಿದೆ ಎಂದು ಹೇಳಿದರು.