ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ. ಇದೇ ವೇಳೆ, ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಿರಿಯ ಬಿಜೆಪಿ ನಾಯಕನನ್ನು ಬಂಧಿಸದಂತೆ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಪ್ರೊ. ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್ ನಾಯ್ಕ್ ತಿಳಿಸಿದರು. ಹತ್ತು ದಿನಗಳ ಕಾಲಾವಕಾಶ ನೀಡಿದರೆ ಹಿರಿಯ ವಕೀಲರಿಗೆ ಮಾಹಿತಿ ನೀಡಲಾಗುವುದು ಎಂದು ವಕೀಲರು ಮನವಿ ಮಾಡಿದ್ದರಿಂದ ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದರು.
ಪ್ರಕರಣದ ತನಿಖೆ ನಡೆಸಿದ ಸಿಐಡಿ ಜೂನ್ 27ರಂದು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಪ್ರಕರಣದ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಯಡಿಯೂರಪ್ಪ ಅವರು, ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ್ದು ಇದಕ್ಕೆ ಬಾಲಕಿ ಆಕ್ಷೇಪ ವ್ಯಕ್ತಪಡಿಸಿದಾಗ ಸಂತ್ರಸ್ತೆ ಮತ್ತು ಆಕೆಯ ತಾಯಿಗೆ ಹಣ ಕೊಟ್ಟು ಕಳುಹಿಸಿದ್ದರು ಎಂದು ಆರೋಪಪಟ್ಟಿಯಲ್ಲಿ ಆರೋಪಿಸಿದ್ದಾರೆ. ಯಡಿಯೂರಪ್ಪ ಜೊತೆಗೆ ಅವರ ಸಹಾಯಕರಾದ ಇತರ ಮೂವರು ಸಹ ಆರೋಪಿಗಳಾದ ಅರುಣ್ ವೈ ಎಂ, ರುದ್ರೇಶ್ ಎಂ ಮತ್ತು ಜಿ ಮರಿಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 204 ಮತ್ತು 214ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಫೆಬ್ರವರಿ 2ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ್ದಾಗ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಈ ವರ್ಷ ಮಾರ್ಚ್ 14ರಂದು ಪ್ರಕರಣ ದಾಖಲಿಸಲಾಗಿತ್ತು. ಅಚಾನಕ್ ಎಂಬಂತೆ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ 54 ವರ್ಷದ ಸಂತ್ರಸ್ತೆಯ ತಾಯಿ ಶ್ವಾಸಕೋಶದ ಕ್ಯಾನ್ಸರ್‌ನಿಂದಾಗಿ ಮೇ ತಿಂಗಳಲ್ಲಿ ಮೃತಪಟ್ಟಿದ್ದರು.