ಎಚ್.ಕೆ ಪಾಟೀಲ್ 
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆ ಮಾಡಲಿ: ಎಚ್.ಕೆ ಪಾಟೀಲ್

ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಬೆಂಗಳೂರು: 2023 - 24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವಂತೆ ಬರ ಸಂಭವನೀಯ ಪ್ರದೇಶಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಸಚಿವ ಎಚ್‌. ಕೆ. ಪಾಟೀಲ್ ಒತ್ತಾಯಿಸಿದರು.

ಕಳೆದ ವರ್ಷ ಫೆ.01 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದು, ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುತ್ತವೆ ಎಂದು ತಿಳಿಸಿದ್ದರು. ಕೇಂದ್ರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿದೆ. ಆದರೆ ಈ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿರಬೇಕು. ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದದ ಕ್ರಮ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಹಾಗೂ ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿವೆ. ಇದು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಎಲ್ಲ ಅರ್ಹತೆಗಳನ್ನು ಪಡೆದಿದೆ ಎಂದು ತಿಳಿಸಿದೆ. ಅಲ್ಲದೇ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 5,300 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ರಾಜ್ಯಕ್ಕೆ ಪತ್ರ ಬರೆದು ಯೋಜನೆಯ ಭೌಗೋಳಿಕ, ಯೋಜನೆಗಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನ ಮತ್ತು ಕೇಂದ್ರದ ನಿಧಿಯಲ್ಲಿರುವ ಅನುದಾನಕ್ಕನುಗುಣವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪತ್ರದಲ್ಲಿನ ಅಂಶಗಳನ್ನು ಗಮನಿಸಿದರೆ ಅನುದಾನದಲ್ಲಿ ಬಹುತೇಕ ಕಡಿತ ಅಥವಾ ತಿರಸ್ಕರಿಸುವ ಅನುಮಾನ ಮೂಡಿದೆ ಎಂದು ಕಿಡಿಕಾರಿದರು.

ಮಹದಾಯಿ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿಯೇ ಮಹದಾಯಿ ಜಲ ವಿವಾದ ಕುರಿತು ನ್ಯಾಯಮಂಡಳಿ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ನ್ಯಾಯಮಂಡಳಿ ಅವಶ್ಯಕತೆ ಇಲ್ಲದಿದ್ದರೂ ಕಾಂಗ್ರೆಸ್‌ ನ್ಯಾಯಮಂಡಳಿ ರಚಿಸಿತು ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿರುವುದು ಅವರ ನಿರ್ಲಕ್ಷವನ್ನು ತೋರುತ್ತದೆ. ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT