ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರಿಂದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದೆ. ನಾಗಮಂಗಲ ಟಿ.ಬಿ. ಬಡಾವಣೆಯ ಬದರಿಕೊಪ್ಪಲಿನ ಗಜಪಡೆ ಯುವಕರ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಟಾಪಿಸಲಾಗಿತ್ತು. ನಿನ್ನೆ ಸಂಜೆ ಬದರಿಕೊಪ್ಪಲಿನಿಂದ ಮೈಸೂರು ರಸ್ತೆಯ ದರ್ಗಾ ಬಳಿ ಮೆರವಣಿಗೆ ತೆರಳುತ್ತಿದ್ದಂತೆ ಕಿಡಿಗೇಡಿಗಳು ಏಕಾಏಕಿ ಕಲ್ಲು, ಬಾಟಲಿಗಳನ್ನು ಎಸೆದಿದ್ದಾರೆ. ಬಳಿಕ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ದುಷ್ಕರ್ಮಿಗಳ ಗುಂಪು ಅಂಗಡಿ, ಅಂಗಡಿ ಮುಂದಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದೆ. ಅಷ್ಟೇ ಅಲ್ಲದೆ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹಿಂದೂಪರ ಸಂಘಟನೆಗಳು ಕೂಡಾ ಪ್ರತಿದಾಳಿ ನಡೆಸಿದ್ದಾರೆ. ಪೊಲೀಸರು ಲಾಠಿಚಾರ್ಜ್ ನಡೆಸಿ ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಜಿಲ್ಲಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಾಗಮಂಗಲದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಸೆಪ್ಟೆಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗತ್ರಾ ಕ್ರಮವಾಗಿ ಇಂದು ನಾಗಮಂಗಲದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪೊಲೀಸರು ಇಂದು ಸಂಜೆ ಪಥ ಸಂಚಲನ ನಡೆಸಿ ಕಾನೂನು ಮತ್ತು ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದರು.
ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿರುವುದು ಆಕಸ್ಮಿಕವಾಗಿ ಕಲ್ಲು ತೂರಾಟ, ಇದೊಂದು ಸಣ್ಣ ಘಟನೆಯಾಗಿದ್ದು ಕೋಮು ಗಲಭೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಿನ್ನೆ ಈ ಘಟನೆ ನಡೆಯಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಮನವಿ ಮಾಡಿದರು. ನಾಗಮಂಗಲ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್ಐಗೂ ಗಾಯವಾಗಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವಿನಂತಿಸಿದ್ದಾರೆ. ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲು ತೂರಾಟ ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಇಂದು ಸ್ಥಳಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿತು. ನಾಗಮಂಗಲಕ್ಕೆ ನಾಳೆ ಭೇಟಿ ನೀಡುವುದಾಗಿ ಕೇಂದ್ರ ಭಾರಿ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಗುರುವಾರ ತಿಳಿಸಿದ್ದು, ಅಮಾಯಕ ಜನರನ್ನು ಬಂಧಿಸದಂತೆ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಗುರುವಾರ ತೀರ್ಪ ಕಾಯ್ದಿರಿಸಿದೆ.
ಬಿಎಂಟಿಸಿಯ 100 ಹೊಸ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಅವರು, ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗಿದೆ ಎಂದರು.
ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಇಲ್ಲಿನ ಕರಂಗಲ್ಪಾಡಿಯ ಸಿಜಿ ಕಾಮತ್ ರಸ್ತೆಯಲ್ಲಿ ಗುರುವಾರ ಹಳೆ ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ಸಜೀವ ಸಮಾಧಿಯಾಗಿದ್ದಾರೆ. ಮಂಗಳೂರಿನ ಜೈಲ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ನೋಡನೋಡುತ್ತಲೇ ಗೋಡೆ ಅಲ್ಲಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಬಿದ್ದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ.