ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಮುನಿರತ್ನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈಮಧ್ಯೆ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಯಾಗಿದೆ.
ದೇಶದಲ್ಲಿ ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯ ವಿಷಯವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು.
ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದು ಅರಮನೆಯಿಂದ ಹೊರಬಂದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮಳೆ ಕಾರಣ ಆನೆಗೆಳಿಗೆ ಅರಮನೆ ಆವರಣದಲ್ಲೇ ತಾಲೀಮು ನಡೆಸಲಾಗಿತ್ತು. ರಾತ್ರಿ ವೇಳೆಗೆ ಧನಂಜಯ್ ಹಾಗೂ ಕಂಜನ್ ಆನೆಗಳ ನಡುವೆ ಗುದ್ದಾಟ ಶುರುವಾಗಿ ಜಯ ಮಾರ್ತಾಂಡ ದ್ವಾರದಿಂದ ಆನೆಗಳು ಓಡಿಬಂದಿತ್ತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು. ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಆನೆಗಳು ಬೆದರಿ ನಿಂತಿದ್ದು, ಮಾವುತರು ಕಾವಾಡಿಗರು ಸಮಾಧಾನಪಡಿಸಿ ಯಾವುದೇ ಅನಾಹುತ ನಡೆಯದಂತೆ ನೋಡಿಕೊಂಡಿದ್ದಾರೆ.
ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ಪುನೀತ್ ಮೇಲೆ ಯುವಕ ವರುಣ್ ಹಲ್ಲೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಯುವಕ ಸೆ.19ರಂದು ತನ್ನ ಸ್ನೇಹಿತನೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್‌ಗೆ ಇಬ್ಬರು ಯುವತಿಯರು ಸೇರಿ ಮೂವರನ್ನು ಕರೆತಂದಿದ್ದ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸೆಕ್ಯೂರಿಟಿ ಸಿಬ್ಬಂದಿ 12ರ ನಂತರ ಅಪರಿಚಿತರಿಗೆ ಅಪಾರ್ಟ್‌ಮೆಂಟ್‌ಗೆ ಪ್ರವೇಶವಿಲ್ಲ ಎಂಬ ನಿಯಮವಿದೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ವರುಣ್ ಹಲ್ಲೆ ನಡೆಸಿದ್ದ, ಅಲ್ಲದೆ, ನಾನ್ಯಾರು ಗೊತ್ತಾ? ಡಿಸಿಪಿ ಮಗ, ಸಿಎಂ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಧಮ್ಕಿ ಹಾಕಿದ್ದ ಎಂದು ತಿಳಿದುಬಂದಿದೆ.
ಕೆಲ ದಿನಗಳ ಮಟ್ಟಿಗೆ ನ್ಯಾಯಾಲಯದ ಕಲಾಪಗಳನ್ನು ನೇರಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಅವರಿಗೆ ಬೆಂಗಳೂರಿನ ವಕೀಲರ ಸಂಘ ಮನವಿ ಮಾಡಿದೆ. ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮುಖ್ಯನ್ಯಾಯಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಲೈವ್ ಸ್ಟ್ರೀಮಿಂಗ್ ನಲ್ಲಿ ವಿಚಾರಣೆಯ ವೇಳೆ ನ್ಯಾಯಮೂರ್ತಿಯೊಬ್ಬರು ವ್ಯಕ್ತಪಡಿಸಿದ ವಿವಾದಾತ್ಮಕ ಅಭಿಪ್ರಾಯವು ರಾಷ್ಟ್ರದಾದ್ಯಂತ ಸುದ್ದಿಯಾಗಿದೆ. ನ್ಯಾ. ಶ್ರೀಶಾನಂದ ಅವರ ಹೇಳಿಕೆ ವೈರಲ್ ಆಗಿದ್ದು, ಇದರಿಂದ ಎಲ್ಲಾ ವಕೀಲರ ಭಾವನೆಗಳಿಗೂ ನೋವುಂಟಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾ.ಶ್ರೀಶಾನಂದ ಮಹಿಳಾ ವಕೀಲೆಯೊಬ್ಬರ ಕುರಿತು ನೀಡಿರುವ ಹೇಳಿಕೆ ಇದಾಗಿತ್ತು. ಮುಕ್ತ ನ್ಯಾಯಾಲಯದಲ್ಲಿ ವ್ಯಕ್ತಪಡಿಸುವಂತಹ ಅಭಿಪ್ರಾಯಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವವರೆಗೆ ನ್ಯಾಯಾಲಯಗಳ ಲೈವ್ ಸ್ಟ್ರೀಮಿಂಗ್ ಅನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.
ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ಮಾದರಿಯ ಪ್ರಕರಣವೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಯುವತಿಯೊಬ್ಬರ ದೇಹವನ್ನು 30 ತುಂಡುಗಳಾಗಿಸಿ ಫ್ರಿಡ್ಜ್ ನಲ್ಲಿಡಲಾಗಿರುವುದು ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಾಲಕ್ಷ್ಮಿ ಎಂಬ ಹೆಸರಿನ ಸಂತ್ರಸ್ತೆ ಹೊರರಾಜ್ಯದವರು ಆದರೆ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಎಂದು ಮೇಲ್ನೋಟಕ್ಕೆ ಪತ್ತೆಯಾಗಿದೆ. 10-15 ದಿನಗಳ ಹಿಂದೆ ಈ ಹತ್ಯೆ ಮಾಡಿರುವ ಸಾಧ್ಯತೆ ಇದೆ.