ರಾಜ್ಯ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧ ಎದುರು ಬಿಜೆಪಿ ನಾಯಕರ ಪ್ರತಿಭಟನೆ, ಮುತ್ತಿಗೆ ಯತ್ನ; ಪೊಲೀಸರ ವಶಕ್ಕೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಇಂದು ಪಾಲ್ಗೊಂಡಿದ್ದರು.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್‌ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಇಂದು ಗುರುವಾರ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದೆ.

ವಿಧಾನಸೌಧದ ಮಹಾತ್ಮಗಾಂಧಿ ಪ್ರತಿಮೆ ಎದುರು ವಿಧಾನಸಭೆ ಮತ್ತು ಪರಿಷತ್ತಿನ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರು ಘೋಷಣಾ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಸಿದ್ದರಾಮಯ್ಯನವರ ವಿರುದ್ಧ ನ್ಯಾಯಾಲಯದ ಎರಡು ಆದೇಶಗಳು ಬಂದಿವೆ, ನಾವು ಮೊದಲು ವಿಧಾನಸಭೆಯ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದಾಗ ಸಿಎಂ ಸೇರಿದಂತೆ ಕಾಂಗ್ರೆಸ್ ನ ಇತರ ನಾಯಕರು ಇದನ್ನು ರಾಜಕೀಯ ಪ್ರೇರಿತ ಎಂದು ಬಣ್ಣಿಸಿದರು. ರಾಜ್ಯಪಾಲರ ಆದೇಶ ಬಂದಾಗ ಅವರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಆದೇಶದಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.

ಈಗ ಹೈಕೋರ್ಟ್ ಮತ್ತು ವಿಶೇಷ ನ್ಯಾಯಾಲಯವು ಆದೇಶಗಳನ್ನು ನೀಡಿವೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ನ್ನು ಎತ್ತಿಹಿಡಿದು ತನಿಖೆಗೆ ಆದೇಶಿಸಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಪ್ರತಿಭಟನೆಯ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶವಿದ್ದರೂ ಕೂಡ ಕಾಂಗ್ರೆಸ್ ರಾಜಕೀಯ ಪ್ರೇರಿತ ಎಂಬ ನಾಟಕವಾಡುತ್ತಿದೆ.ಸಿದ್ದರಾಮಯ್ಯ ರಾಜೀನಾಮೆ ನೀಡಿ ಗೌರವಯುತವಾಗಿ ಸಹಕರಿಸಬೇಕು, ಸರಕಾರ ಹೋಗಬೇಕು ಎಂದು ನಾವು ಹೇಳುತ್ತಿಲ್ಲ. ನಮಗೆ ನ್ಯಾಯಯುತ ತನಿಖೆ ಬೇಕು ಮತ್ತು ಸರ್ಕಾರಿ ಆಸ್ತಿಯನ್ನು ರಕ್ಷಿಸಬೇಕು.

ಮಾಜಿ ಮತ್ತು ಚುನಾಯಿತ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ವ್ಯವಹರಿಸುವ ವಿಶೇಷ ನ್ಯಾಯಾಲಯವು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ದೂರಿನ ಮೇರೆಗೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆಯನ್ನು ಪ್ರಾರಂಭಿಸಲು ಆದೇಶ ಹೊರಡಿಸಿದೆ.

ಮೊನ್ನೆ ಬುಧವಾರ ವಿಶೇಷ ನ್ಯಾಯಾಲಯದ ಆದೇಶದ ಹೊರಬಿದ್ದ ಕೂಡಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿದ್ದು ಪ್ರತಿಭಟನೆ ಮುಂದುವರಿಸಿದ್ದಾರೆ. ತನಿಖೆಯನ್ನು ಸ್ವತಂತ್ರ ಸಂಸ್ಥೆ ಸಿಬಿಐಗೆ ವಹಿಸಿ, ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಒತ್ತಾಯಿಸುತ್ತಿದ್ದಾರೆ.

ಹೈಕೋರ್ಟ್ ಆದೇಶ ಹೊರಬಿದ್ದಲ್ಲಿಂದ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಲೇ ಬಂದಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ಕೆಬಿ ಕೋಳಿವಾಡ್‌ ಅವರು ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಸೂಚಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಶೋಕ, ಆಡಳಿತ ಪಕ್ಷದ ಹಲವು ನಾಯಕರಿಂದ ಇದೇ ರೀತಿಯ ಬೇಡಿಕೆ ಇದೆ. ಕಾಂಗ್ರೆಸ್‌ನಲ್ಲಿ ಈಗಾಗಲೇ ಸಿಎಂ ಸ್ಥಾನಕ್ಕೆ ಹಲವು ಹಕ್ಕುದಾರರಿದ್ದಾರೆ ಎಂದ ಅವರು, ಕೆಲ ದಿನಗಳಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೋರಿ ಅವರ ಪಕ್ಷದಲ್ಲೇ ಬಂಡಾಯ ಏಳುತ್ತದೆ. ಅದಕ್ಕೂ ಮುನ್ನ ಅವರು ರಾಜೀನಾಮೆ ನೀಡುವುದು ಒಳ್ಳೆಯದು ಎಂದರು.

ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಹೋರಾಟ ನಡೆಯಲಿದೆ ಎಂದು ಭವಿಷ್ಯ ನುಡಿದ ಅಶೋಕ್ ಅವರು, ಈಗಾಗಲೇ ಸಿಎಂ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯವಿದೆ, ಆರು-ಏಳು ಸಚಿವರು ಈಗಾಗಲೇ ಸಿಎಂ ಸ್ಥಾನದ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಇಲ್ಲಿ ಸಿಎಂ ಸ್ಥಾನಕ್ಕಾಗಿ ಶಾಸಕರ ನಡುವೆ ಸಭೆ ಆರಂಭವಾಗಲಿದೆ.

ವಿಧಾನಸೌಧ ಕಟ್ಟಡಕ್ಕೆ ಮುತ್ತಿಗೆ ಹಾಕುವ ಉದ್ದೇಶದಿಂದ ಸಿಎಂ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ನಿರತ ಬಿಜೆಪಿ ಶಾಸಕರು ಮತ್ತು ಅಶೋಕ ಸೇರಿದಂತೆ ಮುಖಂಡರನ್ನು ಪೊಲೀಸರು ಬಸ್‌ನಲ್ಲಿ ಕರೆದೊಯ್ದರು.

ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶ ಹೊರಬಿದ್ದಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಮೈಸೂರಿನ ಮುಂದುವರಿದ ಪ್ರದೇಶದಲ್ಲಿ ಮುಡಾದಿಂದ ‘ಸ್ವಾಧೀನಪಡಿಸಿಕೊಂಡಿರುವ’ ಭೂಮಿಗೆ ಹೋಲಿಸಿದರೆ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ಪರಿಹಾರದ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಮುಡಾದಿಂದ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಅದು ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತು.

ವಿವಾದಾತ್ಮಕ ಯೋಜನೆಯಡಿಯಲ್ಲಿ, ವಸತಿ ಬಡಾವಣೆಗಳನ್ನು ರೂಪಿಸಲು ಅವರಿಂದ ಸ್ವಾಧೀನಪಡಿಸಿಕೊಂಡಿರುವ ಅಭಿವೃದ್ಧಿಯಾಗದ ಭೂಮಿಗೆ ಬದಲಾಗಿ ಭೂ ಕಳೆದುಕೊಳ್ಳುವವರಿಗೆ ಮುಡಾ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ ಶೇಕಡಾ 50ರಷ್ಟು ಜಮೀನನ್ನು ಮಂಜೂರು ಮಾಡಿದೆ.

ಮೈಸೂರು ತಾಲೂಕಿನ ಕಸಬಾ ಹೋಬಳಿಯ ಕಾಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನಿನಲ್ಲಿ ಪಾರ್ವತಿ ಅವರಿಗೆ ಯಾವುದೇ ಕಾನೂನು ಹಕ್ಕು ಇಲ್ಲ ಎಂದು ಆರೋಪಿಸಲಾಗಿದೆ.

ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಕರೆದೊಯ್ದ ಪೊಲೀಸರು: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ ಅರವಿಂದ ಬೆಲ್ಲದ, ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಜನಾರ್ದನ ರೆಡ್ಡಿ, ಎನ್ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಸೇರಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಸ್​ನಲ್ಲಿ ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT