ಸಂಗ್ರಹ ಚಿತ್ರ 
ರಾಜ್ಯ

ಬೆಲೆ ಏರಿಕೆಗೆ ಖಂಡನೆ: BJP ಅಹೋರಾತ್ರಿ ಧರಣಿ, BSY ಭಾಗಿ, ಸರ್ಕಾರದ ವಿರುದ್ಧ ಆಕ್ರೋಶ

ರಾಜ್ಯ ಬಿಜೆಪಿ ಬುಧವಾರ ಮಧ್ಯಾಹ್ನ ದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ.

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ನಗರ ಫ್ರೀಡಂ ಪಾರ್ಕ್'ನಲ್ಲಿ ಬುಧವಾರ ಅಹೋರಾತ್ರಿ ಧರಣಿ ನಡೆಸಿದ್ದು, ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಿ ಹೋರಾಟದ ಕಿಚ್ಚು ಹೆಚ್ಚಾಗುವಂತೆ ಮಾಡಿದ್ದಾರೆ.

ರಾಜ್ಯ ಬಿಜೆಪಿ ಬುಧವಾರ ಮಧ್ಯಾಹ್ನ ದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ. ಬಳಿಕ ಇದೇ ತಿಂಗಳ 5ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಲಿದೆ. ಬಳಿಕ 7ರಿಂದ ಬೆಲೆ ಏರಿಕೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿಯು ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

ಧರಣಿ ನೇತೃತ್ವ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಸರ್ಕಾರ ವಿವಿಧ ತೆರಿಗೆಗಳು ಮತ್ತು ಸರಕುಗಳ ಬೆಲೆಗಳನ್ನು ಹೆಚ್ಚಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವವರೆಗೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಮತ್ತು ಯಾವುದೇ ನೀರಾವರಿ ಕಾರ್ಯಗಳನ್ನು ಕೈಗೆತ್ತಿಕೊಂಡಿಲ್ಲ. ಅಭಿವೃದ್ಧಿ ಕಾರ್ಯಗಳ ಬದಲು ಸರ್ಕಾರ ಸರಕುಗಳ ಬೆಲೆ ಹೆಚ್ಚಿಸುವಲ್ಲಿ ನಿರತರಾಗಿದ್ದಾರೆ. ಈ ಮೂಲಕ ಸಾರ್ವಜನಿಕರ ಕೋಪಕ್ಕೆ ಗುರಿಯಾಗಿದ್ದಾರೆ. ಈ ಸರ್ಕಾರಕ್ಕೆ ಅಧಿಕಾರದಲ್ಲಿರಲು ಯಾವುದೇ ನೈತಿಕ ಹಕ್ಕಿಲ್ಲ" ಎಂದು ಕಿಡಿಕಾರಿದರು.

ಇದೇ ವೇಳೆ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ತಿಳಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿಯೂ ತಿಳಿಸಿದರು.

ಇದು ತುಘಲಕ್ ಶೈಲಿಯ ಸರ್ಕಾರವಾಗಿದ್ದೂ, ಎಲ್ಲರೂ ವಿರೋಧಿಸಬೇಕಾಗಿದೆ. ಸರ್ಕಾರ ಸಾರ್ವಜನಿಕ ಹಿತಾಸಕ್ತಿಯನ್ನು ಮರೆತಿದೆ. ಈ ಸರ್ಕಾರ ಹೆಚ್ಚು ಕಾಲ ಅಧಿಕಾರದಲ್ಲಿ ಉಳಿಯದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಪ್ರತಿ ಮನೆಗೂ ಹೋಗಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಸಮಸ್ಯೆಗಳನ್ನು ತಿಳಿದುಕೊಳ್ಳಲು ರಾಜ್ಯಾದ್ಯಂತ ಪ್ರವಾಸ ಮಾಡಬೇಕು ಎಂದು ಸಲಹೆ ನೀಡಿದರು.

ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2,000 ರೂ.ಗಳ ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು.

ಆದರೆ, ಪೆಟ್ರೋಲ್, ಡೀಸೆಲ್, ಹಾಲು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕವನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ. ಇದು ಬಡವರು, ರೈತರು ಮತ್ತು ಸಾಮಾನ್ಯ ಜನರ ಜೀವನವನ್ನು ದುಸ್ತರಗೊಳಿಸಿದೆ ಎಂದು ಟೀಕಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ.40 ಕಮಿಷನ್ ಆರೋಪದ ತನಿಖೆಗಾಗಿ ರಚಿಸಲಾದ ನಾಗಮೋಹನ್ ದಾಸ್ ಸಮಿತಿಯು ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಗುತ್ತಿಗೆದಾರರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು, ಆದರೆ, ದಾಖಲೆಗಳನ್ನು ಒದಗಿಸಲು ವಿಫಲರಾದರು. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜನರಿಗೆ ಸುಳ್ಳು ಹೇಳಿದೆ ಎಂಬುದನ್ನು ಇದು ತೋರಿಸುತ್ತದೆ. ಅವರಿಗೆ ಅಧಿಕಾರದಲ್ಲಿರಲು ನೈತಿಕ ಹಕ್ಕಿಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ನಡುವೆ ಧರಣಿ ನಡೆಸಿದ ಬಿಜೆಪಿ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಯಕ್ಷಗಾನ ಮತ್ತು ಬೀದಿ ನಾಟಕಗಳನ್ನು ಆಯೋಜಿಸಿ, ಬೆಲೆಗಳನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಪಹಾಸ್ಯ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT