ಬೆಂಗಳೂರು/ಕೊಡಗು: ಪಕ್ಷದ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಹೆಸರಿಸಬೇಕೆಂದು ಒತ್ತಾಯಿಸಿ ಬಿಜೆಪಿ ಶನಿವಾರ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾವಿನ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
ಬಿಜೆಪಿಯಿಂದ ಇತರ ಕೆಲವು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದವು. ಪ್ರಕರಣದ ಬಗ್ಗೆ ಸಿಬಿಐ ತನಿಖೆಗೂ ಪಕ್ಷ ಒತ್ತಾಯಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಕುಶಾಲನಗರದಲ್ಲಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿ ಬಸ್‌ನಲ್ಲಿ ಕರೆದೊಯ್ದರು.
ನಾಯಕರನ್ನು ಬಂಧಿಸುತ್ತಿದ್ದಂತೆ ಗೊಂದಲದ ವಾತಾವರಣ ಉಂಟಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಪೊಲೀಸರು ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (40) ಶುಕ್ರವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಕಿರುಕುಳದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಾಟ್ಸಾಪ್ ಗ್ರೂಪ್‌ನಲ್ಲಿ ಅವರು ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಡೆತ್ ನೋಟ್ ಆಧಾರದಲ್ಲಿ ಸಂತ್ರಸ್ತ ವ್ಯಕ್ತಿಯ ಹಿರಿಯ ಸಹೋದರ ಜೀವನ್ ಕೆ ಎಸ್ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕಾರ್ಯಕರ್ತ ತೆನ್ನಿರ ಮಹೀನ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರಿಗೆ ಸಲ್ಲಿಸಿದ ಕೈಬರಹದ ದೂರಿನಲ್ಲಿ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಮತ್ತು ಹರೀಶ್ ಪೂವಯ್ಯ ಅವರ ಹೆಸರುಗಳನ್ನು ಉಲ್ಲೇಖಿಸಿದ್ದರೂ, ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಲಾಗಿಲ್ಲ.
ಏತನ್ಮಧ್ಯೆ, ಸೋಮಯ್ಯ ಅವರ ಮೃತದೇಹವನ್ನು ಸೋಮವಾರಪೇಟೆಯ ಗೋಣಿಮರೂರು ಗ್ರಾಮಕ್ಕೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.